ಮುಂಬೈ(ಜು.18): ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಹಾಗೂ ಎನ್’ಸಿಪಿ ಪಕ್ಷದ ಬಹುತೇಕ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಹರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಎನ್’ಸಿಪಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.

ಇದೇ ವೇಳೆ ಯಾವ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಪಾಟೀಲ್, ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೂಡ ಬಿಜೆಪಿ ಸೇರಿದರೆ ಅಚ್ಚರಿ ಪಡಬೇಕಿಲ್ಲ ಎಂದು ಹೇಳುವ ಮೂಲಕ ಕುತೂಹಲ ಕೆರಳಿಸಿದರು.

ಇನ್ನು ಪಾಟೀಲ್ ಹೇಳಿಕೆಯನ್ನು ಮಹಾರಾಷ್ಟ್ರ ಎನ್’ಸಿಪಿ ಹಾಗೂ ಕಾಂಗ್ರೆಸ್ ಖಂಡಿಸಿದ್ದು, ಇಂತಹ ಹೇಳಿಕೆ ನೀಡಲು ಪಾಟೀಲ್ ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿವೆ.