ಬೆಂಗಳೂರು : ರಾಮನಗರ ಜಿಲ್ಲೆಯ ತಾವರೆಕರೆ ಹೋಬಳಿಯ ಮಂಚನಬೆಲೆ ಜಲಾಶಯ ಸುತ್ತಮುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. 

ತಾವರೆಕೆರೆ ಹೋಬಳಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ರೇವಣ್ಣಸಿದ್ದಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿಗೊಳಿಸಿತು. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್. ಎನ್.ಚನ್ನಬಸಪ್ಪ ವಾದ ಮಂಡಿಸಿ, ಮಂಚನಬೆಲೆ ಡ್ಯಾಂ ಸುತ್ತಮುತ್ತಲ ಗ್ರಾಮಗಲ್ಲಿ ಭಾರಿ ಪ್ರಮಾಣ ದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲು ಗಳನ್ನು ಪುಡಿ ಮಾಡಲು ಭಾರಿ ಪ್ರಮಾಣದ ಕ್ರಷರ್ ಬಳಸಲಾಗುತ್ತಿದೆ. ಇದರಿಂದ ಜಲಾಶಯಕ್ಕೆ ಹಾನಿ ಯಾಗುವ ಜತೆಗೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ದೂರಿದರು.