ಬೆಂಗಳೂರು [ಸೆ.20]:  ರಾಜ್ಯದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಜತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕುವಂತೆ ಮಾಡಲು ಅಗತ್ಯ ನಿಯಮಾವಳಿಗಳನ್ನು ಒಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಶೀಘ್ರ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ಗುರುವಾರ ನಗರದ ಅಂಬೇಡ್ಕರ್‌ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರಾಜ್ಯ ಪರಿಶಿಷ್ಟಜಾತಿ ಮತ್ತು ಪಂಗಡದ ಉದ್ದಿಮೆದಾರರ ಕೈಗಾರಿಕೆಗಳ ಸಂಘ ಹಮ್ಮಿಕೊಂಡಿದ್ದ ‘ಸರ್ಕಾರದ ಸವಲತ್ತುಗಳ ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 2019-20ನೇ ಸಾಲಿನಲ್ಲಿ ಅನುಷ್ಠಾನಕ್ಕೆ ತರಲಿರುವ ನೂತನ ಕೈಗಾರಿಕಾ ನೀತಿಯಲ್ಲಿ ಉದ್ದಿಮೆಗಳು ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡುವಂತೆ ಮಾಡಲು ಅಗತ್ಯ ನಿಯಮಾವಳಿ ರೂಪಿಸಲಾಗುವುದು. ಜತೆಗೆ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ಉದ್ದಿಮೆದಾರರಿಗೆ ಹೆಚ್ಚಿನ ರಿಯಾಯಿತಿ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುವುದು. ಈ ಸಮುದಾಯದವರಿಗೆ ನೀಡಲಾಗುವ ಫ್ಲಾಟ್‌, ಶೆಡ್‌ ಮತ್ತು ಇತರೆ ಮಳಿಗೆಗಳ ಮೀಸಲಾತಿಯನ್ನು ಶೇ.50ರಿಂದ 75ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ಎಸ್‌ಸಿಪಿ-ಟಿಎಸ್‌ಪಿ ಅನುದಾನ ಕಡಿತವಿಲ್ಲ:

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗೆ ಮೀಸಲಾಗಿರುವ ಅನುದಾನವನ್ನು ನೆರೆ ಸೇರಿದಂತೆ ಇತರ ಉದ್ದೇಶಕ್ಕೆ ಬಳಸಿಕೊಳ್ಳುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಅವರಿಗೋಸ್ಕರವೇ ವಿನಿಯೋಗಿಸಲಾಗುವುದು. ಈ ಮೊತ್ತವನ್ನು ಅಗತ್ಯತೆಗಳನ್ನು ಆಧರಿಸಿ ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶ ಸರ್ಕಾರದ್ದು. ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ ಯಾವ ಆಲೋಚನೆಯೂ ಸರ್ಕಾರಕ್ಕಿಲ್ಲ. ಈ ಬಗ್ಗೆ ಗಾಳಿ ಸುದ್ದಿಗಳಿಗೆ ಕಿಡಿಗೊಡಬಾರದು. ಈಗಾಗಲೇ ಈ ಯೋಜನೆಗೆ 30,447 ಕೋಟಿ ರು. ಹಣಕ್ಕೆ ಅನುಮೋದನೆ ನೀಡಲಾಗಿದೆ ಎಂದ ಅವರು, ದಲಿತ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಹಣಕಾಸು ನಿಗಮದಲ್ಲಿ (ಕೆಎಸ್‌ಎಫ್‌ಸಿ) ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ಉದ್ಯಮಿಗಳಿಗೆ ಸುಲಭವಾಗಿ ಸಾಲ ಸಿಗುವಂತಾಗಬೇಕು. ಎನ್‌ಪಿಎ (ವಸೂಲಾಗದ ಸಾಲ) ಕಾರಣ ನೀಡಿ ಯಾವುದೇ ಅರ್ಜಿಯನ್ನು ಪರಿಗಣಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ ಜರುಗಿಸಲಾಗುವುದು. ಕೈಗಾರಿಕೆ ಸ್ಥಾಪಿಸಲು ಉದ್ದೇಶಿಸಿರುವ ನಿವೇಶನವನ್ನೇ ಅಡಮಾನವಾಗಿ ಪರಿಗಣಿಸಿ ಸಾಲ ಮಂಜೂರು ಮಾಡಿ ಎಂದು ಕೆಎಸ್‌ಎಫ್‌ಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದಲ್ಲಿ ಒಟ್ಟು 7 ಲಕ್ಷ ದೊಡ್ಡ, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ನೋಂದಣಿಯಾಗಿದ್ದು, ಕಳೆದ 8 ವರ್ಷಗಳಿಂದ ಎಸ್‌ಸಿ/ ಎಸ್‌ಟಿ ಉದ್ದಿಮೆದಾರರಿಗೆ 656 ಕೋಟಿ ರು. ವೆಚ್ಚ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ಎಸ್ಸಿ ಮತ್ತು ಎಸ್ಟಿಉದ್ದಿಮೆದಾರರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಗುತ್ತಿಗೆ ಮೀಸಲಿನಲ್ಲೂ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಡಾ.ಎಲ್‌.ಹನುಮಂತಯ್ಯ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್‌ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌, ಶಾಸಕ ಎಚ್‌.ಕೆ.ಕುಮಾರಸ್ವಾಮಿ, ಎನ್‌.ಮಹೇಶ್‌, ಮಾಜಿ ಶಾಸಕ ಡಿ.ಎಸ್‌.ವೀರಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.