ನವದೆಹಲಿ: ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಳ್ಳುವ ಮೂಲಕ ಹಿನ್ನಡೆ ಅನುಭವಿಸಿರುವ ಬಿಜೆಪಿ ಗುರುವಾರ ಎರಡು ಆತ್ಮಾವಲೋಕನ ಸಭೆಗಳನ್ನು ನಡೆಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಾದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರು, ಸಂಘಟನೆ ವ್ಯವಹಾರ ಹೊತ್ತಿರುವವರ ಸಭೆ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಸತ್‌ ಅಧಿವೇಶನ ನಡೆಯುತ್ತಿರುವಾಗ ಪ್ರತಿ ವಾರ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮೋದಿ ಅವರು ಮಾತನಾಡುವುದು ವಾಡಿಕೆ. ಆದರೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಅವರು ಆ ಸಭೆ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ಸಂಸದರ ಜತೆಗಿನ ಸಭೆ ವೇಳೆ ಚುನಾವಣಾ ಫಲಿತಾಂಶ, ಲೋಕಸಭೆ ಚುನಾವಣೆಗೆ ಪಕ್ಷ ಕೈಗೊಳ್ಳಲು ಉದ್ದೇಶಿಸಿರುವ ಪ್ರಚಾರ ಕುರಿತು ಅವರು ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

ಅದಾದ ನಂತರ ಮಧ್ಯಾಹ್ನದಿಂದ ರಾತ್ರಿವರೆಗೂ ಅಮಿತ್‌ ಶಾ ಸಭೆ ನಡೆಸಲಿದ್ದಾರೆ. ಈ ಸಭೆಯನ್ನು ಫಲಿತಾಂಶಕ್ಕೂ ಮೊದಲೇ ನಿಗದಿಪಡಿಸಲಾಗಿತ್ತು ಎನ್ನಲಾಗಿದೆ. ಸಂಘಟನೆ ವಿಷಯಗಳಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮಾಹಿತಿಗಳನ್ನು ಈ ಸಭೆಯಲ್ಲಿ ಅಮಿತ್‌ ಶಾ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.