ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವರು ಇದೀಗ ಹೊಸ ಸುಳಿವೊಂದನ್ನು ನೀಡಿದ್ದಾರೆ. ಸಾಲ ಮನ್ನಾವೂ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ..

ಬೆಂಗಳೂರು :  ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಕೃಷಿ ಸಾಲದ ಮನ್ನಾ ಮತ್ತಷ್ಟುವಿಳಂಬವಾಗುವ ಸಾಧ್ಯತೆ ಇದೆ.

ವಿಕಾಸಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಸಾಲಮನ್ನಾ ವಿಳಂಬವಾಗುವ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲಮನ್ನಾದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. 

ಈ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಸಾಲಮನ್ನಾ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ಶುಕ್ರವಾರ ನಡೆಯುವ ಸಚಿವ ಸಂಪುಟದಲ್ಲಿ ರಾಷ್ಟ್ರೀಕೃತ ಸಾಲಮನ್ನಾ ಕುರಿತು ಚರ್ಚೆ ನಡೆಸಲಾಗುತ್ತದೆಯೋ ಇಲ್ಲವೋ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕೊಡಗು ಜಿಲ್ಲೆಯ ಮಳೆಯ ಅನಾಹುತಕ್ಕೂ ರಾಷ್ಟ್ರೀಕೃತ ಸಾಲಮನ್ನಾಕ್ಕೂ ಯಾವುದೇ ಸಂಬಂಧ ಇಲ್ಲ. ರೈತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದರು.