ಇನ್ನೆರಡು ದಿನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಅಲ್ಲದೇ ಪರಿಶಿಷ್ಟ ಜಾರಿಗೆ ಹುದ್ದೆ ನೀಡುವ ಬಗ್ಗೆ ಚಿಂತನೆ ನಡೆದಿದೆ.
ಬೆಂಗಳೂರು [ಜೂ.27] : ಪರಿಶಿಷ್ಟ ಸಮುದಾಯಕ್ಕೆ ಸೇರಿದವರನ್ನು ಪಕ್ಷದ ಮುಂದಿನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗಂಭೀರ ಚಿಂತನೆ ನಡೆಸಿದ್ದಾರೆ.
ಪಕ್ಷದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅವರ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಚುರುಕುಗೊಳಿಸಲು ನೂತನ ರಾಜ್ಯಾಧ್ಯಕ್ಷರನ್ನು ಇನ್ನೆರಡು ದಿನದಲ್ಲಿ ನೇಮಕ ಮಾಡಲಾಗುವುದು. ಪಕ್ಷದ ಚುಕ್ಕಾಣಿಯನ್ನು ಪರಿಶಿಷ್ಟರಿಗೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಕ್ಷದ ಯುವ ಘಟಕದ ಅಧ್ಯಕ್ಷರಾಗಿರುವ ಮಧು ಬಂಗಾರಪ್ಪ ಅವರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಿದ್ದಾರೆ. ಪಕ್ಷದ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ಇದೆ ಎಂದು ಹೇಳಿದರು. ಈ ಬಾರಿ ನಮ್ಮ ಪಕ್ಷದಿಂದ ಏಳು ಮಂದಿ ಪರಿಶಿಷ್ಟಸಮುದಾಯದ ಶಾಸಕರು ಚುನಾಯಿತರಾಗಿದ್ದಾರೆ. ದೇವೇಗೌಡರು ಅವರಿಗೇನೂ ಮಾಡಿಲ್ಲ ಎಂಬ ಅಸಮಾಧಾನ ಇದೆ. ಅವರ ಅಸಮಾಧಾನವೂ ನನಗೆ ಗೊತ್ತಾಗುತ್ತದೆ. ಹೀಗಾಗಿ, ರಾಜ್ಯಾಧ್ಯಕ್ಷ ಸ್ಥಾನವನ್ನು ಆ ಸಮುದಾಯದವರಿಗೇ ನೀಡಲು ಚಿಂತನೆ ನಡೆಸಿದ್ದೇನೆ. ಬರುವ ಎರಡು ಅಥವಾ ಮೂರು ದಿನಗಳಲ್ಲಿ ನೂತನ ರಾಜ್ಯಾಧ್ಯಕ್ಷರ ನೇಮಕ ಕೈಗೊಳ್ಳಲಾಗುವುದು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೌಡರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರು ಬಿಜೆಪಿಗೆ ಹೋಗುತ್ತಾರೆ ಎಂಬುದೆಲ್ಲಾ ಸುಳ್ಳು. ಅವರು ಬಿಜೆಪಿಗೆ ಹೋಗುವುದಿಲ್ಲ. ಈ ಬಗ್ಗೆ ನನ್ನ ಬಳಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಹೇಳಿದರು.
