ಶಾಸಕರು, ವಿಧಾನಪರಿಷತ್ ಸದಸ್ಯರ ಆಪ್ತ ಸಹಾಯಕರಿಗೇ ವೇತನ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ. ಇನ್ನು ಈಗ ಶಂಕುಸ್ಥಾಪನೆ ನೆರವೇರಿಸುತ್ತಿರುವ ವಿವಿಧ ಯೋಜನೆಗಳಿಗೆ ಎಲ್ಲಿಂದ ಹಣ ತರುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ರಾಯಚೂರು (ಡಿ.16): ಶಾಸಕರು, ವಿಧಾನಪರಿಷತ್ ಸದಸ್ಯರ ಆಪ್ತ ಸಹಾಯಕರಿಗೇ ವೇತನ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ. ಇನ್ನು ಈಗ ಶಂಕುಸ್ಥಾಪನೆ ನೆರವೇರಿಸುತ್ತಿರುವ ವಿವಿಧ ಯೋಜನೆಗಳಿಗೆ ಎಲ್ಲಿಂದ ಹಣ ತರುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಪರಿವರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಮಸ್ಕಿ ಹಾಗೂ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿ ಇನ್ನು ಮೂರು ತಿಂಗಳು ಮಾತ್ರ. ಇಷ್ಟಾದರೂ ಈಗ ಜಿಲ್ಲೆ ಹಾಗೂ ತಾಲೂಕುಗಳಲ್ಲಿ 1000 ಕೋಟಿ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯದ ಎಂಎಲ್ಎ, ಎಂಎಲ್ಸಿಗಳ ಪಿಎಗಳಿಗೆ ವೇತನ ಕೊಡಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ. ಹೀಗಿರುವಾಗ ಈಗ ಶಂಕುಸ್ಥಾಪನೆ ಮಾಡಿದ ಯೋಜನೆಗಳಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಕ್ಕು, ಧಿಮಾಕಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಸರ್ಕಾರದ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ.

ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವಾಡುತ್ತಿದೆ. ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಬಳಿಕ ರಾಜ್ಯದಿಂದಲೂ ಕಾಂಗ್ರೆಸ್ ತೊಲಗಿಸುವ ಕೆಲಸ ಆರಂಭವಾಗಲಿದೆ ಎಂದರು.

ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ಸಿದ್ದರಾಮಯ್ಯ ಸೌಜನ್ಯಕ್ಕಾದರೂ ಆ ಕುರಿತು ಮಾತನಾಡುತ್ತಿಲ್ಲ. ರಾಜ್ಯದಲ್ಲಿ ಗೃಹ ಮಂತ್ರಿಗಳು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಆರೋಪಿಸಿದರು. ಪರಿವರ್ತನಾ ಯಾತ್ರೆ ನಿಮಿತ್ತ ಪಟ್ಟಣದ ಮುದಗಲ್ ಕ್ರಾಸ್ನಿಂದ ಪ್ರಮುಖ ಬೀದಿಗಳಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರ ಮೆರವಣಿಗೆಯೂ ನಡೆಯಿತು.