17ರಂದು ದೆಹಲಿಯಲ್ಲಿ ಮುಕ್ತ ವಿವಿ ಬಗ್ಗೆ ಸಭೆ
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವನ್ನು (ಕೆಎಸ್‌ಒಯು) ಮುಚ್ಚುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್, ಈ ಸಂಬಂಧ ಇದೇ ತಿಂಗಳ 17ರಂದು ದೆಹಲಿಯಲ್ಲಿ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಶುಕ್ರವಾರ ಬಿಜೆಪಿ ಕಚೇರಿ ಬಳಿ ಮಾಜಿ ಸಚಿವ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾವುದೇ ಕಾರಣಕ್ಕೂ ಕೆಎಸ್‌ಒಯು ಮುಚ್ಚಲು ಅವಕಾಶ ನೀಡುವುದಿಲ್ಲ. ಅಂತಹ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಅಲ್ಲದೇ, ಕೇಂದ್ರದ ಮುಂದೆ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ಕೂಡ ಇಲ್ಲ ಎಂದರು.
ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿಶ್ವವಿದ್ಯಾಲಯವನ್ನು ಪುನಾರಂಭ ಮಾಡಲಾಗುವುದು. ಮಾನ್ಯತೆ ರದ್ದು ಮಾಡಿರುವ ವಿಚಾರದಲ್ಲಿ ಕೆಲವು ಆಯಾಮಗಳಿವೆ. ಅದರಲ್ಲಿ ಪ್ರಮುಖವಾಗಿ ವಿಶ್ವವಿದ್ಯಾಲಯದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಯುಜಿಸಿ ಸಹ ತನಿಖೆ ನಡೆಸುತ್ತಿದೆ. ಮಾನ್ಯತೆ ರದ್ದು ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಅ.17ರಂದು ಸಭೆ ಕರೆಯಾಗಿದ್ದು, ಕೂಲಂಕಷವಾಗಿ ಚರ್ಚಿಸಲಾಗುವುದು. ರಾಜ್ಯ ಸರ್ಕಾರದ ಜತೆಯಲ್ಲಿಯೂ ಸಭೆ ನಡೆಸಲಾಗುವುದು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಇದಕ್ಕೂ ಮುನ್ನ ರಾಮದಾಸ್ ಅವರ ನೇತೃತ್ವದ ತಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರಿಗೂ ಮನವಿ ಸಲ್ಲಿಸಿತು.
