ಮೈಸೂರು (ಸೆ. 28): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಅಧಿಕೃತ ಚಾಲನೆ ದೊರೆಯಲಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬೆಳಗ್ಗೆ 9.39 ರಿಂದ 10.25 ರೊಳಗೆ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಮಹೋತ್ಸವ ಉದ್ಘಾಟಿಸಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ 4 ನೇ ಬಾರಿ ಭಾಗವಹಿಸಲಿದ್ದಾರೆ.

ಈ ಸರ್ಕಾರಿ ಕಂಪನಿ ಎಲ್ಲಾ ನೌಕರರಿಗೂ ದಸರಾಗೆ ತಲಾ 1 ಲಕ್ಷ ರೂ ಬೋನಸ್!

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಪ್ರಲ್ಹಾದ ಜೋಷಿ, ಸುರೇಶ್ ಅಂಗಡಿ, ಉಪಮುಖ್ಯ ಮಂತ್ರಿ ಗೋವಿಂದ ಎಂ.ಕಾರಜೋಳ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವ ವಿ.ಸೋಮಣ್ಣ, ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ದಸರಾ ಮಹೋತ್ಸವ ಉದ್ಘಾಟನೆ ಹಿನ್ನೆಲೆಯಲ್ಲಿ ಶನಿವಾರ ಸಂಜೆ 6.30 ಕ್ಕೆ ಮೈಸೂರು ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಂತರ ದಸರಾ ಮಹೋತ್ಸವ ಉದ್ಘಾಟಕ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಮನೆಗೆ ಭೇಟಿ ನೀಡುವರು. ಅಲ್ಲದೆ, ನಗರದಲ್ಲಿಯೇ ವಾಸ್ತವ್ಯ ಹೂಡಲಿದ್ದು, ಸೆ.29 ರಂದು ಬೆಳಗ್ಗೆ 8.30 ಕ್ಕೆ ಮೈಸೂರು ರಸ್ತೆಯ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳುವರು. 9 ಗಂಟೆಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದು, ಬೆಳಗ್ಗೆ 9.30 ರ ವೇಳೆಗೆ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3.30 ಕ್ಕೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ ದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಸಂಜೆ 4 ಕ್ಕೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ವಸ್ತು ಪ್ರದರ್ಶನ ಉದ್ಘಾಟಿಸಿ, ಸಂಜೆ 4.30  ರ ವೇಳೆಗೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆಗೆ ತೆರಳಲಿದ್ದಾರೆ.