ಬೆಂಗಳೂರು [ಜು.31]:  ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಾಯಿದೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬುಧವಾರ(ಜು.31ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದಲ್ಲಿಯೂ ಮುಷ್ಕರಕ್ಕೆ ಬೆಂಬಲಿಸಿ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.

ಬುಧವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ಮುಷ್ಕರ ಜರುಗಲಿದ್ದು, ಈ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ ಬಂದ್‌ ಆಗಲಿದೆ. ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಭಾರತೀಯ ವೈದ್ಯಕೀಯ ಸಂಘದ ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಹಾಗಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ವ್ಯತ್ಯವಾಗದಂತೆ ವೈದ್ಯಕೀಯ ಸೇವೆ ನೀಡಬೇಕು. ರಜೆಯಲ್ಲಿರುವ ವೈದ್ಯರು ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚಿಸುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಜಿಲ್ಲಾ ಸರ್ಜನ್‌ಗಳಿಗೆ ನಿರ್ದೇಶನ ನೀಡಿದ್ದಾರೆ. ಹಾಗಾಗಿ ಸರ್ಕಾರ ಆಸ್ಪತ್ರೆಗಳಲ್ಲಿ ಎಂದಿನಂತೆ ಆರೋಗ್ಯ ಸೇವೆ ಮುಂದುವರಿಯಲಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಅನ್ನದಾನಿ ಎಂ. ಮೇಟಿ ತಿಳಿಸಿದರು.

ಎನ್‌ಎಂಸಿ ಕಾಯ್ದೆ ಜಾರಿ ವಿರೋಧಿಸಿ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಚಾಮರಾಜಪೇಟೆಯ ಐಎಂಎ ರಾಜ್ಯ ಘಟಕದ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.