ನವದೆಹಲಿ(ಅ.26): ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ.

ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಇತರ ಪ್ರಮುಖ ವಿಪಕ್ಷ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನವದೆಹಲಿಯಲ್ಲಿರುವ ಸಿಬಿಐ ಮುಖ್ಯ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಕಾಲ ಕಳೆಯುತ್ತಿದ್ದಂತೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಲೋಧಿ ರಸ್ತೆಯಲ್ಲಿರುವ ದಯಾಳ್ ಸಿಂಗ್ ಕಾಲೇಜಿನಿಂದ ಸಿಬಿಐ ಮುಖ್ಯ ಕಚೇರಿವರೆಗೂ ಘೋಷಣೆ ಕೂಗಿತ್ತಾ ಪ್ರತಿಭಟನಾಕಾರರು ಹೆಜ್ಜೆ ಹಾಕಿದರು. ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಅಹ್ಮದ್ ಪಟೇಲ್, ಮೋತಿಲಾಲ್ ವೋರಾ, ವೀರಪ್ಪ ಮೊಯ್ಲಿ, ಆನಂದ್ ಶರ್ಮಾ ಸೇರಿದಂತೆ ಟಿಎಂಸಿ ಹಾಗೂ ಎಡಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಮಾತನಾಡಿ, ಸಿಬಿಐ ನಿರ್ದೇಶಕರನ್ನು ಬದಲಾವಣೆ ಮಾಡಿ ಸಂವಿಧಾನಕ್ಕೆ ಅಪಚಾರ ಎಸಗಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಲೇ ದೇಶದ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ಹಿನ್ನಲೆಯಲ್ಲಿ ಸಿಬಿಐ ಕಚೇರಿ ಮುಂದೆ ಭದ್ರತೆಯನ್ನು ಹೆಚ್ಚಿಸಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಧ್ವಂಸಗೊಳಿಸಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.