ನವದೆಹಲಿ: 7 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಿಂದುಗಳನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ರಾಷ್ಟ್ರೀಯ ಜನಸಂಖ್ಯೆ ಸರಾಸರಿ ಹಿಡಿದು ಒಂದು ಸಮುದಾಯವನ್ನು ಅಲ್ಪಸಂಖ್ಯಾತ ಎಂದು ಘೋಷಿಸುವ ಬದಲಾಗಿ, ರಾಜ್ಯವಾರು ಜನಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡು ಅಲ್ಪಸಂಖ್ಯಾತ ಸ್ಥಾನ ನೀಡಲು ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಐದು ಸಮುದಾಯಗಳನ್ನು (ಮುಸ್ಲಿಂ, ಕ್ರೈಸ್ತ, ಸಿಖ್‌, ಬೌದ್ಧ ಹಾಗೂ ಪಾರ್ಸಿ) ಅಲ್ಪಸಂಖ್ಯಾತ ಎಂದು ಘೋಷಿಸಿ 26 ವರ್ಷಗಳ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಸಿಂಧುತ್ವವನ್ನು ಈ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.1992 ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಕಾಯ್ದೆಯ ಸೆಕ್ಷನ್‌ (2)ಸಿ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಆ ಸೆಕ್ಷನ್‌ ಅನ್ನೇ ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಬಿಜೆಪಿ ಸದಸ್ಯರೂ ಆಗಿರುವ ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಅರ್ಜಿಯಲ್ಲಿ ವಿನಂತಿಸಿಕೊಂಡಿದ್ದಾರೆ. 7 ರಾಜ್ಯ ಹಾಗೂ 1 ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದುಗಳೇ ಅಲ್ಪಸಂಖ್ಯಾತರಾಗಿದ್ದಾರೆ ಎಂದು ವಾದಿಸಿದ್ದಾರೆ.