ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡುತ್ತಿಲ್ಲ?! ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುಡುಗು! ಭಾರತ್ ಬಂದ್ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್! ಮೋದಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಜನ ಬೀದಿಗೆ ಬಂದಿದ್ದಾರೆ! ಪ್ರಧಾನಿ ಮೋದಿ ಅವರನ್ನು ತೆಗಳಿದ ಮಾಜಿ ಪಿಎಂ ಮನಮೋಹನ್ ಸಿಂಗ್
ನವದೆಹಲಿ(ಸೆ.10): ನಿರಂತರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಇಂದು ಇಡೀ ದೇಶ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮಾತ್ರ ಈ ಬಗ್ಗೆ ತಮ್ಮ ಮೌನ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್, ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಇಂದು ದೇಶದ ಜನ ಬೀದಿಗಿಳಿಯುವಂತಾಗಿದೆ ಎಂದು ಗುಡುಗಿದರು.
ತೈಲೋತ್ಪನ್ನಗಳ ದರ ಏರಿಕೆಯಿಂದಾಗಿ ಬೇಸತ್ತ ಜನ ಇಂದು ತಾವೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ತಮ್ಮ ಮೌನ ಮುಂದುವರೆಸಿದ್ದಾರೆ. ದರ ಏರಿಕೆಯಿಂದಾಗಿ ಇಂದು ಜನ ತತ್ತರಿಸಿ ಹೋಗಿದ್ದರೂ ಪ್ರಧಾನಿ ಮೋದಿ ಮಾತ್ರ ಈ ಬಗ್ಗೆ ಒಂದೇ ಒಂದು ಶಬ್ದ ಮಾತನಾಡುತ್ತಿಲ್ಲ ಎಂದು ರಾಹುಲ್ ಹರಿಹಾಯ್ದರು.
ಇನ್ನು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮೋದಿ ಸರ್ಕಾರ ಸಾಕಷ್ಟು ಕೆಲಸಗಳನ್ನು ವಿಚಾರಗಳನ್ನು ಮಾಡಿದೆ, ಆದರೆ ಅದಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ವ್ಯಂಗ್ಯವಾಡಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದೆ. ಪ್ರತಿಭಟನೆಗೆ ಕಾಂಗ್ರೆಸ್ ಜೊತೆಗೆ ಸಾಕಷ್ಟು ವಿರೋಧ ಪಕ್ಷಗಳೂ ಕೈಜೋಡಿಸಿವೆ.
