ಬೆಂಗಳೂರು (ಜೂ. 02): ಲೋಕಸಭೆ ಚುನಾವಣೆಯಲ್ಲಿ ಏಕೈಕ ಸ್ಥಾನ ಗಳಿಸಿರುವ ಜೆಡಿಎಸ್ ಪಕ್ಷ ತನ್ನ ಬಲವರ್ಧನೆಗಾಗಿ ಕೆಲವೊಂದು ಬದಲಾವಣೆಗೆ ಮುಂದಾಗಿದೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ನೂತನ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯದ ನಾಯಕ ಎಂದೇ ಪಕ್ಷದಲ್ಲಿ ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಮಹತ್ವದ ಜವಾಬ್ದಾರಿಯನ್ನು ಅವರಿಗೆ ವಹಿಸುವ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಜೆಡಿಎಸ್‌ನ ಯುವ ಘಟಕದ ಸಾರಥ್ಯವನ್ನು ಪ್ರಜ್ವಲ್ ರೇವಣ್ಣಗೆ ವಹಿಸುವ ಬಗ್ಗೆ ಜೆಡಿಎಸ್ ವರಿಷ್ಠರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ರೇವಣ್ಣ ಮೊದಲಿನಿಂದಲೂ ಸಂಘಟನೆಯಲ್ಲಿ ತೊಡಗಿದ್ದು, ರಾಜಕೀಯ ಕಲೆಯನ್ನು ಸಿದ್ಧಿಗೊಳಿಸುವ ನಿಟ್ಟಿನಲ್ಲಿ ಉತ್ಸುಕರಾಗಿದ್ದಾರೆ.

ಇದನ್ನು ಸೂಕ್ಷ್ಮವಾಗಿ ಗಮನಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪಕ್ಷದ ಯುವ ಘಟಕವನ್ನು ಮುನ್ನಡೆಸುವ ಹೊಣೆಯನ್ನು ವಹಿಸುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಪಕ್ಷದಲ್ಲಿ ಕೇಳಿಬಂದಿವೆ.

ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಸೋಲನುಭವಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೂ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ವಹಿಸುವ ಬಗ್ಗೆ ಗಂಭೀರವಾಗಿ ಚಿಂತನೆಗಳು ನಡೆದಿವೆ. ಇನ್ ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವುದು ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಪಕ್ಷದ ಬಗ್ಗೆ ಕಾಳಜಿ ತೋರಿರುವ ಹಿನ್ನೆಲೆಯಲ್ಲಿ ನಿಖಿಲ್‌ಗೂ ಜವಾಬ್ದಾರಿಯೊಂದನ್ನು ನೀಡಿ ರಾಜಕೀಯ ಕಲೆಯನ್ನು ಕಲಿಸುವ ಬಗ್ಗೆ ದೇವೇಗೌಡರು ಆಲೋಚನೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಪಕ್ಷದ ಕಾರ್ಯಕರ್ತರು ಮತ್ತು ಜನರ ನಡುವೆ ಪ್ರಜ್ವಲ್ ರೇವಣ್ಣ ಬೆರೆಯುವುದು, ಒಡನಾಟ ಇಟ್ಟುಕೊಂಡಿರುವುದನ್ನು ಗಮನಿಸಿ ಪಕ್ಷದ ಯುವ ಘಟಕ ಜವಾಬ್ದಾರಿ ನೀಡಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮತ್ತು ಯುವ ಘಟಕ ಅಧ್ಯಕ್ಷರಾಗಿ ಮಧು ಬಂಗಾರಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರನ್ನು ಪಕ್ಷದ ಮುಖ್ಯ ಘಟಕಕ್ಕೆ ತಂದು ಆ ಜಾಗಕ್ಕೆ ಪ್ರಜ್ವಲ್ ಅವರನ್ನು ನಿಯೋಜಿಸುವ ಬಗ್ಗೆ ಮಾತುಕತೆ ನಡೆದಿದೆ.

ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿಯೂ ಪ್ರಜ್ವಲ್ ನಡೆ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಶೀರ್ವಾದ ಪಡೆದು ಮುಂದುವರೆಯುವಂತೆ ದೇವೇಗೌಡ ಅವರು ಮೊಮ್ಮನಿಗೆ ಕಿವಿಮಾತು ಹೇಳಿದ್ದಾರೆ. ಇದಕ್ಕೆ ಪ್ರಜ್ವಲ್ ಅವರಿಂದಲೂ ಒಪ್ಪಿಗೆ ಸಿಕ್ಕಿದ್ದು, ಚಿಕ್ಕಪ್ಪ ಕುಮಾರಸ್ವಾಮಿ ಅವರ ಮಾತಿನಂತೆ ನಡೆದು
ಕೊಳ್ಳುವುದಾಗಿಯೂ ಹೇಳಿದ್ದಾರೆ ಎನ್ನಲಾಗಿದೆ.

ನಿಖಿಲ್ ಕುಮಾರಸ್ವಾಮಿಗೆ ಯಾವ ಪಕ್ಷದಲ್ಲಿ ಯಾವ ಜವಾಬ್ದಾರಿ ನೀಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ದೇವೇಗೌಡ ಅವರು ಈ ಕುರಿತು ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ ಕೈಗೊಳ್ಳುವ
ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.