ನವದೆಹಲಿ[ಜು.15]: ದೇಶದಲ್ಲಿ ಅತಿ ಹೆಚ್ಚು (80) ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ರಾಜ್ಯ ಘಟಕದ ಸಂಪೂರ್ಣ ಹೊಣೆಯನ್ನು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಗೂ ಮುನ್ನ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದ ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿ, ಪೂರ್ವ ಉತ್ತರಪ್ರದೇಶದ ಜವಾಬ್ದಾರಿಯನ್ನು ವಹಿಸಲಾಗಿತ್ತು. ಪಶ್ಚಿಮ ಉತ್ತರಪ್ರದೇಶದ ಹೊಣೆಯನ್ನು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ರಾಯ್‌ಬರೇಲಿ ಹೊರತುಪಡಿಸಿ, ಉಳಿದ 79 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪರಾಭವಗೊಂಡಿತ್ತು. ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಪ್ರಧಾನಿ ಅಭ್ಯರ್ಥಿಯಾಗಿದ್ದ ರಾಹುಲ್‌ ಗಾಂಧಿ ಅವರೇ ಸೋತಿದ್ದರು.

ಸೋಲಿನ ಹಿನ್ನೆಲೆಯಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸುವ ಗುರಿಯೊಂದಿಗೆ ಪ್ರಿಯಾಂಕಾ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆ ಎಂದು ವರದಿಗಳು ಹರಿದಾಡುತ್ತಿದೆ.