ಬೆಂಗಳೂರು (ಮಾ. 06): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂಬಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಸರ್ಕಾರಿ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ವಿಧೇಯಕಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳಬಾರದೆಂದು ರಾಜ್ಯ ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದೆ.

ಸರ್ಕಾರದ ಆದೇಶವನ್ನು ಎಲ್ಲ ನೇಮಕಾತಿ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಸಂಬಂಧ ಸರ್ಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಅವರ ಆಡಳಿತಕ್ಕೆ ಒಳಪಟ್ಟ ಎಲ್ಲ ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸಾರ್ವಜನಿಕ ಉದ್ದಿಮೆಗಳು, ಆಯೋಗ, ನಿಗಮ, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೆ ಆದೇಶ ಪಾಲಿಸಲು ಸೂಚನೆ ನೀಡಬೇಕೆಂದು ತಿಳಿಸಲಾಗಿದೆ.

ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮವಾದ ಜ್ಯೇಷ್ಠತೆಯನ್ನು ವಿಸ್ತರಿಸುವ ಸಂಬಂಧ ಜಾರಿಗೆ ತಂದಿದ್ದ ಅಧಿನಿಯಮ ಅನ್ವಯ ಕಳೆದ ಫೆ. 27 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಯನ್ನು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ವಿಷಯ ಕೊನೆಯ ಹಂತದಲ್ಲಿದ್ದು, ಕೆಲವೇ ವಾರಗಳಲ್ಲಿ ಅಂತಿಮ ತೀರ್ಪು ನೀಡಲಾಗುವುದು, ಹಾಗಾಗಿ ರಿಟ್ ಅರ್ಜಿಯನ್ನು ಸ್ವೀಕರಿಸಿ ಕರ್ನಾಟಕ ಸರ್ಕಾರ ಫೆ. 27 ರಂದು ಹೊರಡಿಸಿದ್ದ ಆದೇಶಕ್ಕೆ ಮಾರ್ಚ್ ಒಂದರಂದು ತಡೆಯಾಜ್ಞೆ ನೀಡಿತ್ತು.