ಬೆಂಗಳೂರು (ಸೆ.20): ಕಾವೇರಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಸಂಬಂಧಿಸಿ ಕಾವೇರಿ ಕೊಳ್ಳದಲ್ಲಿ ಆಕ್ರೋಶ ಭುಗಿಲೆದ್ದಿದೆ.

ರೈತರು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ತೀರ್ಪನ್ನು ಖಂಡಿಸಿ ರಸ್ತೆಗಿಳಿದಿದ್ದಾರೆ. ಶ್ರೀರಂಗಪಟ್ಟಣ, ಮಂಡ್ಯ, ಮೈಸೂರು, ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.

ಮಂಡ್ಯದಲ್ಲಿ ರೈತರು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕಾವೇರಿ ವಿವಾದವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. 

ನಮ್ಮನ್ನು ಜೈಲಿಗೆ ಕಳುಹಿಸಿದರೂ ಪ್ರತಿಭಟನೆಯನ್ನು ಮಾತ್ರ ನಿಲ್ಲಿಸುವುದಿಲ್ಲವೆಂದು ಮಾಜಿ ಸಂಸದ ಹಾಗೂ ಕಾವೇರಿ ಹಿತರಕ್ಷಣಾ ಸಮಿತಿಯ ಮುಖಂಡ ಮಾದೇಗೌಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.