ನವದೆಹಲಿ(ಆ.06): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರ ಮಾತ್ರವಲ್ಲ, ಇಡೀ ದೇಶದ ಭಧ್ರತೆಗೆ ಧಕ್ಕೆ ತಂದಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಕೇಂದ್ರದ ಸರ್ಕಾರದ ಈ ನಿರ್ಧಾರ ಸಂಪೂರ್ಣ ಏಕಪಕ್ಷೀಯವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

ದೇಶವೊಂದು ಅಲ್ಲಿನ ಜನರಿಂದ ರೂಪಗೊಳ್ಳುತ್ತದೆಯೇ ಹೊರತು ತುಂಡು ಭೂಮಿಯಿಂದಲ್ಲ ಎಂದು ರಾಹುಲ್ ಮಾರ್ಮಿಕವಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ದಿಢೀರ್ ನಿರ್ಧಾರದಿಂದ ರಾಷ್ಟ್ರೀಯ ಭದ್ರತೆ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಜಮ್ಮು ಕಾಶ್ಮೀರದ ವಿಚಾರದಲ್ಲಿ ಕಾಂಗ್ರೆಸ್‌ ಮುಂದಿನ ನಡೆಯ ಕುರಿತು ಚರ್ಚಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಇಂದು ಸಭೆ ಸೇರಲಿದೆ.