ನವದೆಹಲಿ [ಜು.1]: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ರಾಷ್ಟ್ರಾ ಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮೊದಲ ಬಾರಿಗೆ ಸೋಮವಾರ ವಿವಿಧ ರಾಜ್ಯಗಳ ಕಾಂಗ್ರೆಸ್‌ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. 

ರಾಹುಲ್‌ ಗಾಂಧಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಪಕ್ಷದ ವಿವಿಧ ಹಂತದ ನಾಯಕರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ಬೆನ್ನಲ್ಲೇ, ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. 

ಈ ಸಭೆಯಲ್ಲಿ ಏನೆಲ್ಲಾ ವಿಚಾರಗಳು ಚರ್ಚೆಯಾಗಲಿವೆ ಎಂಬ ಕುರಿತು ಬಹಿರಂಗವಾಗಿಲ್ಲ. ಆದಾಗ್ಯೂ, ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸೋಮವಾರ(ಇಂದು) ಮಧ್ಯಾಹ್ನ ನಡೆಯಲಿರುವ ಈ ಸಭೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌, ಮಧ್ಯಪ್ರದೇಶ ಸಿಎಂ ಕಮಲ್‌ನಾಥ್‌, ಪಂಜಾಬ್‌ ಸಿಎಂ ಅಮರೀಂದರ್‌ ಸಿಂಗ್‌, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಾಘೇಲ್‌ ಹಾಗೂ ಪುದುಚೇರಿ ಸಿಎಂ ವಿ. ನಾರಾಯಣಸ್ವಾಮಿ ಅವರು ಭಾಗವಹಿಸಲಿದ್ದಾರೆ.