ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಎರಡೂ ಕಡೆ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ ಕೆಲವೆಡೆ ಕೊಂಚ ಮಳೆಯಾಗಲಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವುದನ್ನು ನೋಡಿ.

ಬೆಂಗಳೂರು, ಅ.11: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಎರಡೂ ಕಡೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಕೆಲ ಭಾಗದಲ್ಲಿ ಮಳೆ ಮುಂದುವರೆಯಲಿದೆ. 

ಆದರೆ, ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿ​ಣಾ​ಮ​ವಾಗಿ ಮಳೆ ಮೋಡ​ಗಳು ‘ಒಮನ್‌’ ಕರಾವಳಿ ಕಡೆಗೆ ಚಲಿಸುತ್ತಿವೆ. 

ಇನ್ನು ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಮಳೆ ಮೋಡ​ಗಳು ‘ಒಡಿಶಾ’ ತೀರದ ಕಡೆ ಚಲಿಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿಲ್ಲ. 

ರಾಜ್ಯಗಳ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಮಂಗಳವಾರ ಹಾವೇರಿ, ದಾವಣಗೆರೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಮೈಸೂರು, ಹಾಸನ ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಅತಿ ಹೆಚ್ಚು ದಕ್ಷಿಣ ಕನ್ನಡ 82 ಮಿ.ಮೀ ಮಳೆಯಾದ ವರದಿಯಾಗಿದೆ. ಉತ್ತರ ಕನ್ನಡ 73.9, ಶಿವಮೊಗ್ಗ 68, ಚಿಕ್ಕಮಗಳೂರು 65, ಮೈಸೂರು 58, ಉಡುಪಿ 55.5, ಹಾಸನ 53,ಮಂಡ್ಯ 43.2, ಹಾವೇರಿ 42, ದಾವಣಗೆರೆ 31, ಧಾರವಾಡ 28 ಹಾಗೂ ಚಾಮರಾಜನಗರ 16 ಮಿ.ಮೀ ಮಳೆಯಾದ ವರದಿಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.