ಬೆಂಗಳೂರು :  ಮೇಲ್ಮೈ ಸುಳಿಗಾಳಿ ಹಾಗೂ ‘ಫನಿ’ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.

ಹಿಂದೂ ಮಹಾಸಾಗರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ‘ಫನಿ’ ಚಂಡಮಾರುತ ಮತ್ತು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಮಂಗಳವಾರ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜಪೇಟೆ, ಮೈಸೂರು, ಮಂಡ್ಯ, ಹಾಸನ, ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವಡೆ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಿದೆ. ಬುಧವಾರವೂ ಮಳೆ ಮುಂದುವರೆಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸರೆಡ್ಡಿ ತಿಳಿಸಿದರು.

ಹಗಲ ವೇಳೆಯಲ್ಲಿ ಬಿಸಿಲ ಪ್ರಮಾಣ ಸಾಮಾನ್ಯವಾಗಿರಲಿದ್ದು, ಸಂಜೆ ವೇಳೆಗೆ ಮಳೆ ಆಗಲಿದೆ. ಬುಧವಾರ ಉತ್ತರ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.