ಬೆಂಗಳೂರು[ಮೇ.12]: ಮುಂದಿನ ಮೂರ್ನಾಲ್ಕು ದಿನ ರಾಜ್ಯದ ವಿವಿಧ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.

ಮುಂಗಾರು ಪೂರ್ವ ಅವಧಿಯಲ್ಲಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗಿ ಮಳೆ ಆಗಲಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಎರಡು ಮೂರು ದಿನ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ. ಆದರೆ, ಮೊದಲ ಎರಡು ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ತದನಂತರ ಉತ್ತರ ಕರ್ನಾಟಕ ಭಾಗದಲ್ಲಿಯೂ ಮಳೆ ಆಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.

ಶನಿವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯಾಗಿದೆ. ಭಾನುವಾರವೂ ಈ ಭಾಗದಲ್ಲಿ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದರು.

ಶನಿವಾರ ಮೈಸೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಸರಾಸರಿ 53.5 ಮಿ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ 53, ಉತ್ತರ ಕನ್ನಡ 38.1, ಬೆಂಗಳೂರು 36, ಮಂಡ್ಯ 32.5, ಹಾಸನ 24 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರಾಸರಿ 16 ಮಿ.ಮೀ. ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.