ಬಿಬಿಎಂಪಿ ಆಡಳಿತ ಚುಕ್ಕಾಣಿ ಹಿಡಿಯಲು ಜೆಡಿಎಸ್’ನೊಂದಿಗಿನ ಮೈತ್ರಿ ಮುಂದುವರಿಸುವ ತವಕದಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಈ ಕುರಿತು ಜೆಡಿಎಸ್ ಮುಖಂಡರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಹೊಣೆಯನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಹಿಸಿದೆ.
ಬೆಂಗಳೂರು: ಬಿಬಿಎಂಪಿ ಆಡಳಿತ ಚುಕ್ಕಾಣಿ ಹಿಡಿಯಲು ಜೆಡಿಎಸ್’ನೊಂದಿಗಿನ ಮೈತ್ರಿ ಮುಂದುವರಿಸುವ ತವಕದಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಈ ಕುರಿತು ಜೆಡಿಎಸ್ ಮುಖಂಡರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಹೊಣೆಯನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಹಿಸಿದೆ.
ಕಳೆದ ಎರಡು ವರ್ಷಗಳಿಂದ ಜೆಡಿಎಸ್ ಬೆಂಬಲದೊಂದಿಗೆ ಮೇಯರ್ ಪಟ್ಟ ಪಡೆದಿದ್ದ ಕಾಂಗ್ರೆಸ್ ಈ ಬಾರಿಯೂ ಮೇಯರ್ ಪದವಿ ಉಳಿಸಿಕೊಂಡು ಪಾಲಿಕೆ ಆಡಳಿತ ನಡೆಸಲು ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮೈತ್ರಿ ಮುಂದುವರಿಕೆ ಪೂರ್ವಭಾವಿಯಾಗಿ ಸಚಿವ ರೋಷನ್ ಬೇಗ್ ಅವರು ಎಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಇದೀಗ ಪಕ್ಷದಲ್ಲೇ ಆಂತರಿಕವಾಗಿ ಚರ್ಚೆ ನಡೆಸುತ್ತಿದ್ದು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಇದೇ ಮಾತನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೂ ಪುಷ್ಠೀರಿಸಿ ಮಾತನಾಡಿದ್ದಾರೆ.
ಆದರೆ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪ್ರಕಾರ, ಈಗಾಗಲೇ ಜೆಡಿಎಸ್ ಜತೆ ಮೈತ್ರಿ ಮುಂದುವರೆಸುವ ಹೊಣೆಯನ್ನು ಗೃಹಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್.ಡಿ..ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುವಂತೆ ಸಚಿವರ ರಾಮಲಿಂಗಾ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.
ಇದರಂತೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಶೀಘ್ರದಲ್ಲಿ ಜೆಡಿಎಸ್ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಪಾಲಿಕೆಯಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ಮುಂದುವರಿಯುವ ವಿಶ್ವಾಸವಿದೆ ಎಂದು ಹೇಳಿದರು.
ಇನ್ನೂ ಅಂತಿಮ ನಿರ್ಧಾರ ಆಗಿಲ್ಲ: ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮುಂದುವರಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ.
ಬಿಬಿಎಂಪಿ ಮೇಯರ್ ವಿಚಾರವಾಗಿ ಮೊದಲು ನಮ್ಮ ಪಕ್ಷದ ಮುಖಂಡರ ಜತೆ ಚರ್ಚೆ ಮಾಡುತ್ತೇವೆ. ನಂತರ ಮೈತ್ರಿ ವಿಚಾರವನ್ನು ನಿರ್ಧಾರ ಮಾಡುತ್ತೇವೆ. ಆದುದರಿಂದ ನಮ್ಮ ಪಕ್ಷದವರು ಇನ್ನೂ ಜೆಡಿಎಸ್ ನಾಯಕರನ್ನು ಭೇಟಿಯಾಗಿಲ್ಲ. ಮೈತ್ರಿ ವಿಚಾರವಾಗಿ ಪೂರ್ವಭಾವಿಯಾಗಿ ಇತ್ತೀಚಿಗೆ ಸಚಿವ ರೋಷನ್ ಬೇಗ್ ಅವರು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಮಾತ್ರ ಭೇಟಿ ಮಾಡಿದರು. ಅದನ್ನು ಬಿಟ್ಟರೆ ಯಾರೊಂದಿಗೂ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
