ಚುನಾವಣೆಯ ಅಂತಿಮ ಮೀಸಲು ಪಟ್ಟಿಯು ಬುಧವಾರ ಪ್ರಕಟವಾಗಲಿದೆ. ರಾಜ್ಯದ 215 ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಯುಕ್ತ ಅಂತಿಮಗೊಳಿಸಿರುವ ಮೀಸಲು ಪಟ್ಟಿ ಬುಧವಾರ ಹೊರಬೀಳಲಿದೆ. 

ಬೆಂಗಳೂರು: ರಾಜ್ಯದ 215 ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಯುಕ್ತ ಅಂತಿಮಗೊಳಿಸಿರುವ ಮೀಸಲು ಪಟ್ಟಿ ಕುರಿತು ಬುಧವಾರದೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ. 

ಹೈಕೋರ್ಟ್ ನಿರ್ದೇಶನದ ಹೊರತಾಗಿಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ನಡೆಸಿತು. 

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ವಾದಿಸಿ, ಈಗಾಗಲೇ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಲಾಗಿದೆ. ಉಳಿದಿರುವ 16 ಸಂಸ್ಥೆಗಳಿಗೆ ಮೀಸಲು ಪಟ್ಟಿ ಅಂತಿಮಗೊಳಿಸಲಾಗಿದೆ. ಆ ಕುರಿತು ಬುಧವಾರದೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ಈ ನಡುವೆ ಒಮ್ಮೆ ಚುನಾವಣಾ ಪ್ರಕ್ರಿಯೆ ಆರಂಭವಾದಲ್ಲಿ ಅದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಅವಕಾಶವಿಲ್ಲ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.