ಸಚಿವ ಸಚಿವ ಸ್ಥಾನ ಸಿಗದ ಕಾರಣ ಕಾಂಗ್ರೆಸ್‌ ಪಕ್ಷದ ಮುಖಂಡರ ನಡೆಯ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ದಿಢೀರ್‌ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಂಗಳೂರು : ಸಚಿವ ಸಚಿವ ಸ್ಥಾನ ಸಿಗದ ಕಾರಣ ಕಾಂಗ್ರೆಸ್‌ ಪಕ್ಷದ ಮುಖಂಡರ ನಡೆಯ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ದಿಢೀರ್‌ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಜೆ.ಪಿ.ನಗರದಲ್ಲಿನ ನಿವಾಸಕ್ಕೆ ಶನಿವಾರ ಬೆಳಗ್ಗೆ ತೆರಳಿದ ಸತೀಶ್‌ ಜಾರಕಿಹೊಳಿ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಚರ್ಚೆ ವೇಳೆ ಸತೀಶ್‌ ಜಾರಕಿಹೊಳಿ ಜೆಡಿಎಸ್‌ ಸೇರ್ಪಡೆ ಕುರಿತು ಪ್ರಸ್ತಾಪವಾಗಿದೆ ಎಂದು ಹೇಳಲಾಗಿದೆ. ಆದರೆ, ಈ ವಿಷಯವನ್ನು ಜೆಡಿಎಸ್‌ ನಿರಾಕರಿಸಿದೆ. ಚರ್ಚೆ ವೇಳೆ ಕಾಂಗ್ರೆಸ್‌ ಪಕ್ಷ ತಮ್ಮನ್ನು ನಡೆಸಿಕೊಂಡಿರುವ ಬಗ್ಗೆ ಕುಮಾರಸ್ವಾಮಿ ಬಳಿ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕುಮಾರಸ್ವಾಮಿ ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದ ಸತೀಶ್‌ ಜಾರಕಿಹೊಳಿ, ಕ್ಷೇತ್ರದ ಅಭಿವೃದ್ಧಿ ಹಾಗೂ ರಾಜಕೀಯ ಕಾರಣದಿಂದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಸಚಿವ ಸ್ಥಾನ ಸಿಗದ ಕುರಿತು ಚರ್ಚೆ ನಡೆಸಿಲ್ಲ. ಆದರೆ, ಬೆಳಗಾವಿ ಜಿಲ್ಲೆಗೆ ಬೇರೆ ಆಯ್ಕೆಗಳಿಲ್ಲ. ಎರಡು ವರ್ಷದ ನಂತರ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಸದ್ಯಕ್ಕೆ ಸಂಪುಟ ಸೇರ್ಪಡೆ ಪ್ರಯತ್ನ ಮಾಡುತ್ತಿಲ್ಲ. ನಮ್ಮ ಪರವಾಗಿರುವ ಶಾಸಕರ ಹಿತರಕ್ಷಣೆಗಾಗಿ ಹೋರಾಟ ಮುಂದುವರಿಸಲಾಗುವುದು. ಅವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಕಲ್ಪಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ ಎಂದು ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ತಿಳಿಸಲಾಗಿದೆ. ಮಾತ್ರವಲ್ಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನವೂ ಬೇಡವೆಂದು ಸ್ಪಷ್ಟಪಡಿಸಿದ್ದೇನೆ. ಈಗಾಗಲೇ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಚಿವೆ ಜಯಮಾಲಾ ವಿಚಾರ ಸಂಬಂಧ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಅವರನ್ನು ಸಭಾನಾಯಕಿಯಾಗಿ ನೇಮಕ ಮಾಡುವುದಕ್ಕೆ ವಿರೋಧ ಇದೆ. ಈ ಬಗ್ಗೆ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಲು ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.