ಚಿದಂಬರಂ ನಿರೀಕ್ಷಣಾ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಮತ್ತೆ ಹಿನ್ನಡೆ| ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ| ಪಿ.ಚಿದಂಬರಂ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ನ್ಯಾ. ರಮಣ| ಬಲವಂತದ ಕ್ರಮ ಕೈಗೊಳ್ಳದಿರುವಂತೆ ಸೂಚನೆ ನೀಡಲು ಸುಪ್ರೀಂ ನಕಾರ| ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಗೃಹ ಸಚಿವ|
ನವದೆಹಲಿ(ಆ.21): ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ, ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ್ದು, ಪಿ.ಚಿದಂಬರಂ ಅವರಿಗೆ ಇದೀಗ ಬಂಧನದ ಭೀತಿ ಎದುರಾಗಿದೆ.
ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದ ನ್ಯಾ.ರಮಣ, ಇದಕ್ಕೆ ಸಂಬಂಧಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸಿದರು.
ಮೇಲ್ಮನವಿ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಸಿಬಲ್ ಮನವಿಯನ್ನು ಕೂಡ ಸುಪ್ರೀಂ ಕೋರ್ಟ್ ತಿರಸ್ಕರಿಸಿತು.
ನಿನ್ನೆಯಷ್ಟೇ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.