ಸರ್ಕಾರದ ಪರ ವಾದ ಮಂಡಿಸಲು ನೇಮಕವಾಗಿದ್ದ ವಕೀಲರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು [ಆ.01]: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಮಾಡಿ ರಾಜ್ಯ ಸರ್ಕಾರ 2016ರಲ್ಲಿ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ಸಂಬಂಧ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ವಕೀಲರಾಗಿ ನೇಮಕಗೊಂಡಿದ್ದ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸರ್ಕಾರ ಬದಲಾಗಿರುವ ಕಾರಣ ತಾವು ವಿಶೇಷ ವಕೀಲ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪೊನ್ನಣ್ಣ ಪತ್ರದಲ್ಲಿ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಜುಲೈ 30ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ್ದಾರೆ.
ಎಸಿಬಿ ರಚನೆಯನ್ನು ಪ್ರಶ್ನಿಸಿ ವಕೀಲ ಬಿ.ಜಿ.ಚಿದಾನಂದ ಅರಸ್ ಹಾಗೂ ಬೆಂಗಳೂರು ವಕೀಲರ ಸಂಘ ಸೇರಿದಂತೆ 10ಕ್ಕೂ ಜನರು 2016ರಲ್ಲಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಗಳಲ್ಲಿ ಸರ್ಕಾರದ ಪರ ವಾದ ಮಂಡಿಸಲು ಪೊನ್ನಣ್ಣ ಅವರನ್ನು ವಿಶೇಷ ವಕೀಲರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ 2017ರ ಜೂನ್ 24ರಂದು ಆದೇಶಿಸಿತ್ತು.
