ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸ ಬೇಕಾಗಿದ್ದು, ಈಗಾಗಲೇ ಸ್ಥಳ ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 4, ಭದ್ರಾವತಿಯಲ್ಲಿ 2 ಹಾಗೂ ಇತರ ತಾಲೂಕು ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ತಲಾ ಒಂದು ಕ್ಯಾಂಟೀನ್ ಆರಂಭಿಸಲು ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

ಶಿವಮೊಗ್ಗ(ನ.01): ರಿಯಾಯಿತಿ ದರದಲ್ಲಿ ಆಹಾರ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ 11 ಇಂದಿರಾ ಕ್ಯಾಂಟಿನ್‌'ಗಳನ್ನು ಜಿಲ್ಲೆಯಲ್ಲಿ ಆರಂಭಿಸಲು ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಕ್ಯಾಂಟಿನ್ ನಿರ್ಮಾಣ ಕಾರ್ಯ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾವಾರು ಪ್ರಗತಿ ಪರಿಶೀಲನೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಪಂ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸ ಬೇಕಾಗಿದ್ದು, ಈಗಾಗಲೇ ಸ್ಥಳ ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 4, ಭದ್ರಾವತಿಯಲ್ಲಿ 2 ಹಾಗೂ ಇತರ ತಾಲೂಕು ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ತಲಾ ಒಂದು ಕ್ಯಾಂಟೀನ್ ಆರಂಭಿಸಲು ಅನುಮೋದನೆ ದೊರೆತಿದೆ. ಇದಕ್ಕಾಗಿ ಜಿಲ್ಲೆಗೆ 4.91ಕೋಟಿ ರುಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಕೆಆರ್‌'ಐಡಿಎಲ್ ಸಂಸ್ಥೆಗೆ ನಿರ್ಮಾಣ ಕಾಮಗಾರಿ ವಹಿಸಿಕೊಡಲಾಗಿದೆ. ಒಂದೆರಡು ದಿನಗಳ ಒಳಗಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸಬೇಕು. ಆಡಳಿತಾತ್ಮಕ ಹಾಗೂ ತಾಂತ್ರಿಕ ಅನುಮೋದನೆ ಪಡೆದುಕೊಂಡು ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ವಸತಿ ಯೋಜನೆಯಲ್ಲಿ ಜಿಲ್ಲೆ 23ನೇ ಸ್ಥಾನ:

ಗ್ರಾಮೀಣ ಹಾಗೂ ನಗರ ವಸತಿ ಯೋಜನೆಯಲ್ಲಿ ಜಿಲ್ಲೆಯ ಪ್ರಗತಿ ಉತ್ತಮವಾಗಿಲ್ಲ. ಗ್ರಾಮೀಣ ವಸತಿ ಯೋಜನೆಯಲ್ಲಿ ಜಿಲ್ಲೆ 23ನೇ ಸ್ಥಾನದಲ್ಲಿದೆ. ನಗರ ವಸತಿ ಯೋಜನೆಯಡಿ 1075 ಮನೆಗಳ ಗುರಿಯಿದ್ದು, ಕೇವಲ 327 ಮನೆಗಳನ್ನು ಈವರೆಗೆ ನಿರ್ಮಿಸಲಾಗಿದೆ. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಮನೆ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು.

ಜಿಪಂ ಸಿಇಒ ರಾಕೇಶ್ ಕುಮಾರ್, ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಮಟ್ಟದ ಎಲ್ಲಾ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.