ಬೆಂಗಳೂರು [ಸೆ.12]:  ವಿರೋಧಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ವಿಚಾರವಾಗಿ ಚರ್ಚಿಸಲು ಬುಧವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು ಹಾಗೂ ಶಾಸಕಾಂಗ ನಾಯಕರ ಸಭೆಯಲ್ಲಿ ದಿನೇಶ್‌ ಗುಂಡೂರಾವ್‌ ಹಾಗೂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಈ ವೇಳೆ ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನಾಚರಣೆ, ಪಕ್ಷದ ಸದಸ್ಯತ್ವ ನೋಂದಣಿ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಬಳಿಕ ಹೈಕಮಾಂಡ್‌ ನಾಯಕರ ಜತೆ ವಿರೋಧಪಕ್ಷದ ನಾಯಕರ ಆಯ್ಕೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.