ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಪಕ್ಷದ ರಾಜಕೀಯದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಸ್ಥಳೀಯ ಚುನಾವಣೆ ಸಭೆ ಹಾಗೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬೆಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಗಳ ಬಿಸಿಯೇರುತ್ತಿರುವಂತೆಯೇ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಮೇಲೆ ಹತೋಟಿ ಸಾಧಿಸತೊಡಗಿದ್ದು, ಪಕ್ಷದ ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳತೊಡಗಿದ್ದಾರೆ.
ಪಕ್ಷ ಸಂಘಟನೆ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಸಿದ್ದರಾಮಯ್ಯ ಅವರ ಈ ಉತ್ಸಾಹಕ್ಕೆ ಪೂರಕವಾಗಿ ನಡೆದುಕೊಳ್ಳತೊಡಗಿದ್ದು, ಇದು ಕಾಂಗ್ರೆಸ್ ಬಣ ರಾಜಕೀಯದ ಮೇಲಾಟಕ್ಕೆ ಮತ್ತೊಂದು ವೇದಿಕೆಯಾಗಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಡೆಸುವ ಸಭೆಗಳಲ್ಲಿ ಸಿದ್ದರಾಮಯ್ಯ ಅವರು ತಪ್ಪದೇ ಹಾಜರಾಗಿದ್ದಾರೆ. ಅಲ್ಲದೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇದುವರೆಗೂ ಇಂತಹ ಐದು ಸಭೆಗಳು ನಡೆದಿದ್ದು, ಈ ಸಭೆಗಳಲ್ಲಿ ಮಂಡ್ಯ, ತುಮಕೂರು, ಮಂಗಳೂರು, ಶಿವಮೊಗ್ಗ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸಲಾಗಿದೆ.
ಇದಿಷ್ಟೇ ಅಲ್ಲ, ಮೈಸೂರು ಹಾಗೂ ಬಾದಾಮಿ ಕ್ಷೇತ್ರಕ್ಕೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿಯ ಸಭೆಯು ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದಿದ್ದು, ಆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಸಿ ಕಚೇರಿಯಿಂದ ಅಂತರ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ ಅವರು ಇದೀಗ ಆಗಾಗ ಕೆಪಿಸಿಸಿ ಕಚೇರಿಯಲ್ಲಿ ಕಾಣಿಸಿಕೊಳ್ಳತೊಡಗಿದ್ದಾರೆ. ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರೊಂದಿಗೆ ಸಿದ್ದರಾಮಯ್ಯ ಉತ್ತಮ ಸಾಮರಸ್ಯವನ್ನು ಸಾಧಿಸಿದ್ದಾರೆ. ಈ ಮೂವರು ನಾಯಕರ ನಡುವೆ ಹೊಂದಾಣಿಕೆಯ ಪರಿಣಾಮವಾಗಿಯೇ ಕೊಡಗು ಜಿಲ್ಲೆ ನೆರೆ ಹಾನಿ ಪರಿಶೀಲನೆಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಒಟ್ಟಿಗೇ ಗುರುವಾರ ತೆರಳಲಿದ್ದಾರೆ.
