ನವದೆಹಲಿ[ಮಾ.21]: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅಮಾನಿಸಿದ್ದಾರೆಂದು ಆರೋಪಿಸಿದ್ದಾರೆ. 

ಸ್ಮೃತಿ ಇರಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆಯುತ್ತಾರೆ. ಬಳಿಕ ಅದೇ ಹಾರವನ್ನು ಮಾಜಿ ದಿವಂಗತ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕುತ್ತಾರೆ. ಇದನ್ನು ಖಂಡಿಸಿರುವ ಇರಾನಿ ಈ ಮೂಲಕ ಪ್ರಿಯಾಂಕಾ ಗಾಂಧಿ ಮಾಜಿ ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದು ಕಾಂಗ್ರೆಸ್ ನ ನೈಜ ಸಂಸ್ಕೃತಿ ಎಂದು ವ್ಯಂಗ್ಯ ಮಾಡಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಯಾತ್ರೆ ಹಾಗೂ ಸಮಾವೇಶಗಳಲ್ಲಿ ಭಾಗಿಯಗುತ್ತಿರುವ ಪ್ರಿಯಾಂಕಾ ಗಾಂಧಿ ಪಕ್ಷದ ಕಾರ್ಯಕರ್ತರು ಹಾಗೂ ಜನ ಸಾಮಾನ್ಯರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.