ನವದೆಹಲಿ(ಸೆ.12): 2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜನಾದೇಶ ಪಡೆದ ಬಿಜೆಪಿ, ಈ ಜನಾದೇಶವನ್ನು ತ್ಯಂತ ಅಪಾಯಕಾರಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಜನಾದೇಶವನ್ನು ಅತ್ಯಂತ ಅಪಾಯಕಾರಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹರಿಹಾಯ್ದಿದ್ದಾರೆ.

ದೇಶದ ‘ಕಠೋರ’ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, ಆರ್ಥಿಕ ವೈಫಲ್ಯ ಮರೆಮಾಚಲು ದೇಶದ ಸಂವಿಧಾನದೊಂದಿಗೆ ಆಟವಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಕಾಂಗ್ರೆಸ್‌ ತಾಳ್ಮೆ ಪರೀಕ್ಷಿಸುತ್ತಿದ್ದು, ಕೇಂದ್ರ ಸರ್ಕಾರದ ಆರ್ಥಿಕ, ರಾಜಕೀಯ ವೈಫಲ್ಯದ ವಿರುದ್ಧ ಚಳವಳಿಯ ಮಾರ್ಗ ನಮ್ಮ ಮುಂದಿರುವ ಆಯ್ಕೆ ಎಂದು ಸೋನಿಯಾ ಗುಡುಗಿದ್ದಾರೆ. ಈ ಕೂಡಲೇ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಚಳವಳಿಯ ಕಾರ್ಯಸೂಚಿ ಯೋಜನೆ ಕೈಗೆತ್ತಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಮೋದಿ ಸರ್ಕಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು  ಆರೋಪಿಸಿದ ಸೋನಿಯಾ,  ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಶೀಘ್ರದಲ್ಲೇ ಚಳವಳಿಯ ಮಾರ್ಗ ಹಿಡಿಯಲಿದೆ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳು, ರಾಜ್ಯ ಸರ್ಕಾರದ ಮುಖ್ಯಸ್ಥರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡರು ಭಾಗವಹಿಸಿದ್ದರು.