ಹುಬ್ಬಳ್ಳಿ :  ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ಸಿನಲ್ಲಿ ಒಳ ಬೇಗುದಿ ಹೆಚ್ಚಾಗಿದೆ. ವಿಸ್ತರಣೆಯಾದ ಬಳಿಕ ಮೈತ್ರಿ ಸರ್ಕಾರ ಬೀಳುತ್ತದೆ ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಅದು ಇದೀಗ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿಶ್ರ ಸರ್ಕಾರ ಸಂಪುಟ ವಿಸ್ತರಣೆ ಮಾಡುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಶುರುವಾಗಿದೆ. ಶಾಸಕರನ್ನು ಸೆಳೆದು ಸರ್ಕಾರ ರಚನೆ ಮಾಡಲು ಬಿಜೆಪಿಯೇನೂ ಉತ್ಸುಕವಾಗಿಲ್ಲ. 

ಎರಡ್ಮೂರು ದಿನಗಳಲ್ಲಿ ಸಾಕಷ್ಟುಬದಲಾವಣೆಗಳಾಗುವ ಸಾಧ್ಯತೆಯಿದೆ. ಬಿಜೆಪಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ ಎಂದರು. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಜೊತೆಗೆ ಎಷ್ಟುಶಾಸಕರು ಇದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಸರ್ಕಾರ ರಚನೆ ಮಾಡುವುದರ ಬಗ್ಗೆ ನಮ್ಮ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸಬೇಕು ಎಂದು ಯಾರೂ ಒತ್ತಾಯಿಸಿಲ್ಲ. ಈ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.