ಬೆಂಗಳೂರು :  ಲೋಕಸಭೆ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲು ಕಾಂಗ್ರೆಸ್ ಮುಂದಾಗಿದೆ. ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳನ್ನು ಪುನರ್‌ರಚಿಸುವುದಾಗಿ ಸ್ವತಃ ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. 

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಶನಿವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಅವರು ಅಧ್ಯಕ್ಷರಾಗಿ ತಮ್ಮ ಮೊದಲ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಮುಂದಿನ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯೇತರ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಹೀಗಾಗಿ ಭಯಭೀತಗೊಂಡಿರುವ ಬಿಜೆಪಿಯು 2019 ರಲ್ಲಿ ನಡೆಯಬೇಕಿರುವ ಚುನಾವಣೆಯನ್ನು ಪ್ರಸಕ್ತ ವರ್ಷದ ಡಿಸೆಂಬರ್‌ನಲ್ಲಿಯೇ ನಡೆಸಲು ಮುಂದಾಗುವ ಮಾಹಿತಿ ಇದೆ. ಸೆಪ್ಟೆಂಬರ್ ತಿಂಗಳಲ್ಲಿಯೇ ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡುವ ಸಾಧ್ಯತೆ ಇದೆ. ಶತಾಯಗತಾಯ ಲೋಕಸಭೆ ಚುನಾವಣೆ ಗೆಲ್ಲಲು ಪಕ್ಷದ ಪುನರ್‌ಸಂಘಟನೆಗೆ ಆದ್ಯತೆ ನೀಡಲು ಮುಂದಾಗಿದ್ದೇವೆ. ಇದಕ್ಕಾಗಿ ಆಗಸ್ಟ್ ಬಳಿಕ ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಪುನರ್‌ರಚನೆ ಮಾಡಲಾಗುವುದು. 

ಆಗಸ್ಟ್ 15 ರೊಳಗಾಗಿ ಎಲ್ಲಾ ಬ್ಲಾಕ್ ಸಮಿತಿಗಳ ಸಭೆ ನಡೆಸಿ ಬ್ಲಾಕ್‌ಮಟ್ಟದ ಸ್ಥಿತಿಗತಿ ವಿಶ್ಲೇಷಿಸಲಾಗುವುದು. ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಆಗಸ್ಟ್ 3, 4 ಹಾಗೂ 5 ರಂದು ಲೋಕಸಭಾ ಕ್ಷೇತ್ರವಾರು ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುವುದು. ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಬಳಿಕ ಆಗಸ್ಟ್ ೯ಕ್ಕೆ ಕ್ವಿಟ್ ಇಂಡಿಯಾ ಚಳವಳಿ ದಿನದ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಚರಣೆ ಮಾಡಲಾಗುವುದು. ಜತೆಗೆ ಬ್ಲಾಕ್ ಮಟ್ಟದಲ್ಲಿ ಆ.೧೫ರ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು ಎಂದು ಮಾಹಿತಿ ನೀಡಿದರು.