ಸರ್ಕಾರಿ ಆಸ್ಪತ್ರೆಗಳನ್ನು ಭಾಗಶಃ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಬೆಂಗಳೂರು (ಡಿ.01): ಸರ್ಕಾರಿ ಆಸ್ಪತ್ರೆಗಳನ್ನು ಭಾಗಶಃ ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಎರಡು ಮತ್ತು ಮೂರನೆ ಹಂತದ ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ ಹೃದ್ರೋಗ, ಕ್ಯಾನ್ಸರ್ ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಖಾಸಗಿಗೆ ವಹಿಸುವ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ನೀತಿ ಆಯೋಗ ಜಂಟಿಯಾಗಿ ರೂಪುರೇಷೆ ಸಿದ್ಧಪಡಿಸಿತ್ತು. ಅಲ್ಲದೇ ಈ ಬಗ್ಗೆ ಅಭಿಪ್ರಾಯ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಇದಕ್ಕೆ ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಖಡಕ್ ಆಗಿ ಉತ್ತರಿಸಿದ್ದಾರೆ. ಉತ್ತಮ ಸೇವೆ ಒದಗಿಸುತ್ತಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ಒಪ್ಪಿಸುವಂತಹ ನೀತಿ ಆಯೋಗದ ನಿರ್ಧಾರ ಸರಿಯಲ್ಲ. ಆರೋಗ್ಯ ಮೂಲಭೂತ ಹಕ್ಕು. ಖಾಸಗಿ ಆಸ್ಪತ್ರೆಗಳಿಗೆ ಸರಿಸಮಾನವಾಗಿ ಬಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಚಿಕಿತ್ಸೆ ಕೊಡುವುದು ಸರ್ಕಾರದ ಉದ್ದೇಶವಾಗಬೇಕು. ಆದರೆ, ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ಪ್ರಸ್ತಾವನೆ ಖಾಸಗಿಯವರಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಸಾರ್ವತ್ರಿಕ ಆರೋಗ್ಯ ಯೋಜನೆಗೆ ಚಾಲನೆ ನೀಡಲಿದೆ. ಸರ್ಕಾರದ ಎಲ್ಲ ಯೋಜನೆಗಳಿಗೆ ಮೀಸಲಿಟ್ಟಿರುವ ಹಣವನ್ನು ಒಂದೇ ಯೋಜನೆಯಡಿ ತಂದು ಎಲ್ಲರಿಗೂ ಸಮಗ್ರ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶವಿದೆ. ಇಂತಹ ಸಂದರ್ಭದಲ್ಲಿ ಬೇರೆ ಯಾವುದೇ ಸಲಹೆಗಳನ್ನು ಸ್ವೀಕರಿಸಲು ರಾಜ್ಯ ಸಿದ್ಧ ಇಲ್ಲ. ಹೀಗಾಗಿ ನೀತಿ ಆಯೋಗದ ಪ್ರಸ್ತಾವನೆಯನ್ನು ವಾಪಸ್ ಕಳುಹಿಸುತ್ತಿದ್ದೇವೆ’ ಎಂದು ರಮೇಶ್ ಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
