ಬೆಂಗಳೂರು (ಸೆ.05):  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಮುಕ್ತ ಅವಕಾಶ ಇದೆಯಾದರೂ ಕಾನೂನು ಕೈಗೆತ್ತಿಕೊಂಡರೆ ಪೊಲೀಸರು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ತಕರಾರು ಇಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ಕಾನೂನು ಮೀರಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳ ಮೇಲೆ ಹಾನಿ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಇ.ಡಿ. ಬಂಧಿಸಿರುವುದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ. ಇದರಲ್ಲಿ ಯಾವುದೇ ರಾಜಕೀಯ ದ್ವೇಷ ಇಲ್ಲ. ಇಡಿ, ಐಟಿ ಮತ್ತು ಸಿಬಿಐ ಕೇಂದ್ರದ ಸ್ವಾಯತ್ತ ಸಂಸ್ಥೆಗಳಾಗಿವೆ. ಆ ಸಂಸ್ಥೆಗಳ ಮೇಲೆ ಪ್ರಭಾವ ಬೀರಲು ಸಾಧ್ಯವೇ ಇಲ್ಲ. ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯ ಇರುವ ಕಾರಣಕ್ಕಾಗಿ ಶಿವಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಹಿಂದೆ ಯುಪಿಎ ನೇತೃತ್ವದ ಕಾಂಗ್ರೆಸ್‌ ಆಡಳಿತದವಧಿ ವೇಳೆ ಹಲವು ಪ್ರಕರಣದಲ್ಲಿ ಕೆಲವರನ್ನು ಸಿಬಿಐ, ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಆಗ ಕಾಂಗ್ರೆಸ್‌ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತೇ ಎಂದು ಪ್ರಶ್ನಿಸಿದರು.

ಶಿವಕುಮಾರ್‌ ಬಂಧನ ಖಂಡಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುವುದು ಸರಿಯಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಶಿವಕುಮಾರ್‌ ಯಾವುದೇ ತಪ್ಪು ಮಾಡಿಲ್ಲ ಎಂದರೆ ನ್ಯಾಯಾಲಯವು ಕ್ಲೀನ್‌ಚಿಟ್‌ ನೀಡಲಿದೆ ಎಂದರು.