ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಸುಮಲತಾ ಅವರನ್ನು ಮನವೊಲಿಸುವ ಹೊಣೆಯನ್ನು ಹೈಕಮಾಂಡ್‌ ನನಗೆ ವಹಿಸಿಲ್ಲ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ಸುಮಲತಾ ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸುಮಲತಾ ಅವರನ್ನು ಮನವೊಲಿಸಲು ನನಗೆ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಇನ್ನು ಸುಮಲತಾ ಕುರಿತು ಎಚ್‌.ಡಿ.ರೇವಣ್ಣ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಏನು ಹೇಳಿದ್ದಾರೆ ಎಂಬುದನ್ನು ನೋಡಿ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಟಿಕೆಟ್‌ ಹಂಚಿಕೆ ವಿಚಾರ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರೇ ಉತ್ತರಿಸಲಿದ್ದಾರೆ. ಆ ಬಗ್ಗೆ ಮಾತನಾಡುವುದಿಲ್ಲ ಎಂದರು.

ಮಹದಾಯಿ ಯೋಜನೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಕಾಯ್ದಿರಿಸುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ಕಾಮಗಾರಿಗೆ ನೋಟಿಫಿಕೇಶನ್‌ ಹೊರಡಿಸಿದ ಬಳಿಕ ಕಾಮಗಾರಿ ಆರಂಭ ಮಾಡುತ್ತೇವೆ ಎಂದರು.