ನವದೆಹಲಿ(ಸೆ.15): ಕಾವೇರಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೆರಡೂ ಪಾಲಿಸಬೇಕೆಂದು ನ್ಯಾ.ದೀಪಕ್ ಮಿಶ್ರಾ, ಜಸ್ಟೀಸ್ ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಚಾಟಿ ಬೀಸಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು, ತಮಿಳುನಾಡು ಮತ್ತು ಕರ್ನಾಟಕ ಸರ್ಕಾರಗಳೆರಡೂ ತಮ್ಮ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದೆ. ಹಾಗೆಯೇ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.
ಇತ್ತೀಚೆಗಷ್ಟೆ ಕಾವೇರಿ ನದಿ ನೀರಿನ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಉಭಯ ರಾಜ್ಯಗಳಲ್ಲಿ ವ್ಯಾಪಕ ಗಲಭೆ, ಹಾನಿಗಳುಂಟಾಗಿದ್ದವು.
