ಜಮ್ಮು ಕಾಶ್ಮೀರ(ಸೆ.18): ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್'ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಗುಂಡಿನ ಚಕಮಕಿ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
7 ಭಾರತೀಯ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತ ಹೇಳಲಾಗುತ್ತಿದೆ. 3 ರಿಂದ 4 ಉಗ್ರರ ಗುಂಪು ಬೆಳಿಗ್ಗೆ 5.30ರ ಸುಮಾರಿಗೆ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದರು. ಸೇನಾ ಕಚೇರಿಯ ಸುತ್ತ ಯೋಧರು ಕಾರ್ಯಾಚರಣೆಗಿಳಿದಿದ್ದು, ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ.
ಸ್ಥಳದಲ್ಲಿ ಈಗಾಗಲೇ ವಿಶೇಷ ಸೇನಾ ದಳ ಬೀಡುಬಿಟ್ಟಿದ್ದು, ಗಾಯಗೊಂಡ ಯೋಧರನ್ನು ರಕ್ಷಣೆ ಮಾಡುತ್ತಿದೆ. ದಾಳಿ ಹಿನ್ನೆಲೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕೈಗೊಂಡಿದ್ದ ರಷ್ಯಾ ಮತ್ತು ಅಮೆರಿಕ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
