ಮಂಗಳೂರು[ಏ.16]: ಉಡುಪಿ ಹಾಗೂ ದ.ಕ. ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಟ್ವೀಟ್‌ ಮೂಲಕ ಟಾಂಗ್‌ ನೀಡಿದ್ದಾರೆ.

ಕೆಲವು ಸಮಯದ ಹಿಂದೆ ಸಿಎಂ ಕುಮಾರಸ್ವಾಮಿ ಅವರು, ಕರಾವಳಿ ಜನರ ಜನತೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು ವ್ಯಾಪಕ ಟೀಕೆ, ವಿರೋಧಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅದಕ್ಕೆ ಪ್ರತಿಕ್ರಿಯೆಯಾಗಿ ನಳಿನ್‌ ಕುಮಾರ್‌ ಕಟೀಲ್‌ ಈ ಟ್ವೀಟ್‌ ಮಾಡಿ ಸಿಎಂ ಅವರ ಕಾಲೆಳೆದಿದ್ದಾರೆ.

‘ಮುಖ್ಯಮಂತ್ರಿಯವರೇ..., ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಉಡುಪಿ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಇದನ್ನು ನೋಡಿಯೂ ಈ ಜಿಲ್ಲೆಯ ಜನತೆ ತಿಳಿವಳಿಕೆ ಇಲ್ಲದವರು ಅಂತೀರಾ...? ಇದು ಕ್ಷಮೆ ಕೇಳುವ ಸಮಯ...’ ಎಂದು ನಳಿನ್‌ ಕುಮಾರ್‌ ಟ್ವೀಟ್‌ ಮಾಡಿರುವುದು ಇದೀಗ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.