ಬೆಂಗಳೂರು [ಜು.24] :  ಜಮಖಂಡಿ ವಿಧಾನಸಭೆ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಂಬಂಧ ಕಾಂಗ್ರೆಸ್‌ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ ವಿರುದ್ಧ ಸಾವಳಗಿ ಠಾಣಾ ಪೊಲೀಸರು ದಾಖಲಿಸಿದ್ದ ದೂರು, ಆ ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. 

ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ದೂರು ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಾ.ಜಿ.ಪರಮೇಶ್ವರ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.ಜಮಖಂಡಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಆನಂದ ಸಿದ್ದು ನ್ಯಾಮಗೌಡ ಪರ 2018 ಅ.23ರಂದು ನಡೆಸಿದ್ದ ಪ್ರಚಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಡಾ.ಜಿ.ಪರಮೇಶ್ವರ್‌ ಭಾಗವಹಿಸಿದ್ದರು. 

ಆನಂದ ನ್ಯಾಮಗೌಡರಿಗೆ ಮತ ನೀಡಿ ಗೆಲ್ಲಿಸಿದರೆ ಜಂಬಗಿ-ಸಾವಳಗಿ ರಸ್ತೆಯನ್ನು ಮೂರು ತಿಂಗಳಿನಲ್ಲಿ ಡಾಂಬರೀಕರಣ ಮಾಡಿಕೊಡುವುದಾಗಿ ಆಶ್ವಾಸನೆ ನೀಡಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ಚುನಾವಣಾಧಿಕಾರಿ 2018ರ ಅ.24ರಂದು ಸಾವಳಗಿ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2019ರ ಮಾಚ್‌ರ್‍ 21ರಂದು ಸಮನ್ಸ್‌ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರ ಅವರಿಗೆ ಆದೇಶಿಸಿತ್ತು.