ಬೆಂಗಳೂರು[ಆ.22]: ಮಾಜಿ ಸಂಸದ ಹಾಗೂ ಕಾಂಗ್ರೆಸ್‌ ವಕ್ತಾರರಾದ ವಿ.ಎಸ್‌. ಉಗ್ರಪ್ಪ ಅವರನ್ನು ರಾಜ್ಯ ಕಾಂಗ್ರೆಸ್‌ ಮಾಧ್ಯಮ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿದ್ದ ರಿಜ್ವಾನ್‌ ಅರ್ಷದ್‌ ಅವರನ್ನು ಬದಲಿಸಿ, ವಿ.ಎಸ್‌. ಉಗ್ರಪ್ಪ ಅವರನ್ನು ತಕ್ಷಣದಿಂದ ಅನ್ವಯವಾಗುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮ ವಿಭಾಗಕ್ಕೆ ಅಧ್ಯಕ್ಷರಾದ ಬೆನ್ನ ಹಿಂದೆಯೇ ಉಗ್ರಪ್ಪ ಅವರು ಕಾಂಗ್ರೆಸ್‌ನ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಕ್ತಾರರು ಹಾಗೂ ಮಾಧ್ಯಮ ವಿಭಾಗದ ಪ್ರಮುಖರ ಸಭೆಯಲ್ಲಿ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದು, ಮಾಧ್ಯಮ ವಿಭಾಗವನ್ನು ಮತ್ತಷ್ಟುಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಧ್ಯಮ ವಿಭಾಗದ ಪ್ರಕಟಣೆ ತಿಳಿಸಿದೆ.