ಬೆಂಗಳೂರು: ಆಪರೇಷನ್ ಕಮಲ ಮಾಡುವ ಅಗತ್ಯ ನಮ್ಮ ಪಕ್ಷಕ್ಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಯಡಿಯೂರಪ್ಪ ಈ ತಿರುಗೇಟು ನೀಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ನಾವು ಯಾವುದೇ ರೀತಿಯಲ್ಲೂ ಬೇರೆ ಪಕ್ಷಗಳ ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡುತ್ತಿಲ್ಲ. ನಮಗದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ಇಲ್ಲಿ ಕುಳಿತೇ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುತ್ತೇವೆ. 

ಗುರುವಾರದಿಂದ ಪಕ್ಷದ ನಾಯಕರ 3  ತಂಡಗಳು ರಾಜ್ಯ ಪ್ರವಾಸ ಆರಂಭಿಸಲಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೇವೆ. ಜತೆಗೆ ಸರ್ಕಾರದ ವೈಫಲ್ಯಗಳು ಏನೇನು ಎಂಬುದನ್ನು ಆಳವಾಗಿ ತಿಳಿದುಕೊಳ್ಳುತ್ತೇವೆ. ನಂತರ ಮುಂದಿನ ಹೋರಾಟ ರೂಪಿಸುತ್ತೇವೆ ಎಂದು ತಿಳಿಸಿದರು.