ಜೆಡಿಎಸ್ ಮಣಿಸಲು ಸಜ್ಜಾದ ಕಾಂಗ್ರೆಸ್ ಸಂಪೂರ್ಣವಾಗಿ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಮಂಡ್ಯ: ಕಾಂಗ್ರೆಸ್‌ ಯಾವತ್ತಿಗೂ ಬಲ ಹೀನ ಎನ್ನುವ ಹಾಗಿಲ್ಲ. ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಎದುರಾಳಿ ಜೆಡಿಎಸ್‌ ಹಾಗೂ ಬಿಜೆಪಿ ವಿರುದ್ಧ ಪ್ರಬಲ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಎರಡೂ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ನಾವು ಸಜ್ಜಾಗಿದ್ದೇವೆ. ಮೈಸೂರು, ರಾಮನಗರ, ಮಂಡ್ಯ, ಹಾಸನ ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಜೆಡಿಎಸ್‌ ಪ್ರಬಲವಾಗಿದ್ದರೂ ನಾವು ಅವರನ್ನು ಮಣಿಸಿ ಅಚ್ಚರಿಯ ಫಲಿತಾಂಶ ಕೊಡುತ್ತೇವೆ, ಕಾದು ನೋಡಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಸುಸೂತ್ರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಚುನಾವಣೆ ಪ್ರಚಾರದಲ್ಲೂ ಸರ್ಕಾರಕ್ಕೆ ಮುಜುಗರವಾದಂತೆ ನಡೆದುಕೊಳ್ಳುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದೇವೆ. ಯಾವುದೇ ಸಮಸ್ಯೆ ಸೃಷ್ಟಿಸುವುದಿಲ್ಲ ಎಂದು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲುವುದಕ್ಕೆ ಕಾರಣಗಳು ಇರಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು, ರೈತಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿತ್ತು. ಪಕ್ಷ ಅಥವಾ ಸರ್ಕಾರದ ಮೇಲೆ ಯಾವುದೇ ಗಂಭೀರ ಆರೋಪಗಳೂ ಇರಲಿಲ್ಲ. ನಾವು ಚುನಾವಣೆಯಲ್ಲಿ ಬೇರೆ ಬೇರೆ ಕಾರಣಗಳಿಂದ ಸೋಲನುಭವಿಸಬೇಕಾಯಿತು ಎಂದರು.