ನಮ್ಮ ಹಕ್ಕಿಗೆ ಚ್ಯುತಿ ಬಂದಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ವಿಚಾರಣೆಗೆ ನಾವು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು [ಜು.22]: ವಿಪ್ ವಿಚಾರದಲ್ಲಿ ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋಟ್‌ಗೆ ಸಲ್ಲಿಸಿರುವ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದ್ದು, ನಾವು ಎದುರು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪ್ ಜಾರಿ ಮಾಡುವುದು ಆಯಾ ಪಕ್ಷಗಳಿಗೆ ಸಾಂವಿಧಾನಿಕವಾಗಿ ಇರುವ ಹಕ್ಕು. ಆದರೆ, ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆ ಬಗ್ಗೆ ಸ್ಪಷ್ಟತೆ ಇಲ್ಲದೆ ಇರುವುದರಿಂದ ನಮ್ಮ ಹಕ್ಕಿಗೆ ಚ್ಯುತಿ ಬಂದಿದೆ.
ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಮಂಗಳವಾರ ವಿಚಾರಣೆಗೆ ಬರಲಿದೆ. ನಾವು ಎದುರು ನೋಡುತ್ತಿದ್ದೇವೆ. ಈ ಅರ್ಜಿ ಇತ್ಯರ್ಥವಾಗದ ಹೊರತು ವಿಶ್ವಾಸಮತ ಯಾಚನೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ನಮಗೆ ಸಂವಿಧಾನದ ಮೇಲೆ ನಂಬಿಕೆಯಿದೆ. ಸಂವಿಧಾನ ಬದ್ಧವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಯಾರಿಗೆ ಜನ ಬೆಂಬಲ ಇದೆ ನಮಗೆ ಗೊತ್ತು. ವಿಶ್ವಾಸಮತ ಮಂಡನೆ ನಿರ್ಣಯ ಕುರಿತು ಸ್ಪೀಕರ್ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
