ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು ಈ ವೇಳೆ ಇಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣೆ ವೇಳೆ ನಡೆದ ಹಿಂಸಾಚಾರದಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕೋಲ್ಕತಾ [ಮೇ.14] : ಪಶ್ಚಿಮ ಬಂಗಾಳದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಇಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣೆ ವೇಳೆ ನಡೆದ ಹಿಂಸಾಚಾರದಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮೂರು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಿಪಿಎಂ ಕಾರ್ಯಕರ್ತರು ಮೃತಪಟ್ಟಿದ್ದು, ಮುರ್ಶಿದಾಬಾದ್ ನಲ್ಲಿ ಸಂಭವಿಸಿದ ಖಚ್ಚಾ ಬಾಂಬ್ ಸ್ಫೋಟದಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಇನ್ನೋರ್ವ ಟಿಎಂಸಿ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದಾರೆ. ಹಿಂಸಾಚಾರದಲ್ಲಿ ಐವರು ಪತ್ರಕರ್ತರು ಗಾಯಗೊಂಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಇದೊಂದು ಅತ್ಯಂತ ಭೀಕರವಾರ ಕೃತ್ಯವಾಗಿದೆ. ಮತದಾನದ ವೇಳೆ ಭಾರತದಲ್ಲಿ ಈ ಹಿಂದೆ ಎಂದಿಗೂ ಕೂಡ ಇಂತಹ ಕೃತ್ಯ ಸಂಭವಿಸಿರಲಿಲ್ಲ ಎಂದು ಹೇಳಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬರುತ್ತಿದೆ ಎಂದು ಟಿಎಂಸಿ ಮುಖಂಡ ಡೆರೆಕ್ ಒ ಬ್ರಿಯಾನ್ ಹೇಳಿದ್ದಾರೆ.
ಈ ಘಟನೆಯನ್ನು ಖಂಡಿಸಿರುವ ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಇಂತಹ ಹಿಂಸಾತ್ಮಕ ಘಟನೆ ನಡೆಯುತ್ತಿದೆ. ಇದನ್ನು ನಾವೆಂದಿಗೂ ಕೂಡ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಹೇಳಿದ್ದಾರೆ.
ಒಟ್ಟು 3 ಹಂತದಲ್ಲಿ ಇಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, 38,616 ಮಂದಿ ಚುನಾವಣಾ ಕಣದಲ್ಲಿದ್ದಾರೆ. ಒಟ್ಟು 3358 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸಲಾಗುತ್ತಿದೆ.
