ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ಗುರುವಾರ ಸ್ಪಷ್ಟ ಮಾತುಗಳಲ್ಲಿ ತಳ್ಳಿ ಹಾಕಿದ್ದಾರೆ.

ಮಂಗಳೂರು: ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ಗುರುವಾರ ಸ್ಪಷ್ಟ ಮಾತುಗಳಲ್ಲಿ ತಳ್ಳಿ ಹಾಕಿದ್ದಾರೆ.

ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ವಿಚಾರ ಸುಳ್ಳು. ಅಂತರ ಯಾವುದೇ ಪ್ರಸ್ತಾವ ಇಲ್ಲ. ಇಂತಹ ಸುದ್ದಿಗಳೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದಾಟದ ಭಾಗ ಅಷ್ಟೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇದೇ ವೇಳೆ, ಡಿ.ಕೆ.ಶಿವಕುಮಾರ್ ಬಂದರೂ ನಾವು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸಿದ್ದು ಗೊಂದಲ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಗಾಗಿ ಗುರುವಾರ ಮಂಗಳೂರಿಗೆ ಆಗಮಿಸಿದ್ದ ಯಡಿಯೂರಪ್ಪ ಅವರು ಸುದ್ದಿಗಾರರ ಜತೆ ಮಾತನಾಡಿ, ‘ರಾಜಕೀಯ ಗೊಂದಲ ಸೃಷ್ಟಿಸಲು ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿಯ ಪರಿವರ್ತನಾ ರ್ಯಾಲಿಗೆ ದೊರೆತ ಜನಬೆಂಬಲಕ್ಕೆ ಹೆದರಿ ಸಿದ್ದರಾಮಯ್ಯ ಅವರು ಈ ರೀತಿಯ ತಂತ್ರಗಾರಿಕೆ ನಡೆಸುತ್ತಿದ್ದಾರೆ’ ಎಂದು ದೂರಿದರು.