ಬೆಂಗಳೂರು[ಸೆ.29]: ರಾಜ್ಯಕ್ಕೆ ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ತಿಂಗಳು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ ದೊಡ್ಡ ಮಟ್ಟದ ಹಾನಿ ಸಂಭವಿಸಿತ್ತು. ಹೀಗಾಗಿ, ನಾಲ್ಕೈದು ರಾಜ್ಯಗಳಿಗೆ ಒಂದೇ ಹಂತದಲ್ಲಿ ಪರಿಹಾರ ಬಿಡುಗಡೆಯಾಗಲಿದೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಶನಿವಾರ ನನ್ನೊಂದಿಗೆ ಪರಿಹಾರ ಘೋಷಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕರ್ನಾಟಕ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂದಿದ್ದಾರೆ. ಇದರಿಂದ ಸಂತ್ರಸ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಆಯೋಗ ದಿನಾಂಕ ಘೋಷಣೆ ಮಾಡಿದೆ. ನಾವೆಲ್ಲರೂ ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಅದನ್ನು ಎದುರಿಸಲು ಸಿದ್ಧವಾಗಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಸಣ್ಣಪುಟ್ಟಗೊಂದಲಗಳಿದ್ದರೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಸ್ಥಾನ ಗೆಲ್ಲಲು ಕಾರ್ಯತಂತ್ರ ರೂಪಿಸುವುದಾಗಿ ಹೇಳಿದರು.

ಶೀಘ್ರ ಪರಿಹಾರ ಬಿಡುಗಡೆ:ಜೋಶಿ

ಮತ್ತೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ದೇಶದಲ್ಲೇ ಮೊದಲ ಬಾರಿಗೆ ಈ ಮಟ್ಟದ ನೆರೆ ಬಂದಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಹೇಳಿದರು.