ಈ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿತರಣೆ ವಿಳಂಬ..!
* ಈ ಬಾರಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿತರಣೆ ಕೊಂಚ ತಡವಾಗುವುದು ಖಚಿತ
* ಪ್ರತಿ ವರ್ಷ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಂದು ಕ್ರೀಡಾ ಪ್ರಶಸ್ತಿ ವಿತರಿಸಲಾಗುತ್ತಿತ್ತು.
* ಮೇಜರ್ ಧ್ಯಾನ್ ಚಂದ್ ಜನ್ಮದಿನದ ಸ್ಮರಣಾರ್ಥ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತದೆ.
ನವದೆಹಲಿ(ಆ.13): ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಸಾಧನೆ ಮಾಡುವವರನ್ನೂ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಪರಿಗಣಿಸುವ ಉದ್ದೇಶದಿಂದ ಈ ಬಾರಿ ಪ್ರಶಸ್ತಿ ಪ್ರದಾನ ಸಮಾರಂಭ ವಿಳಂಬವಾಗಲಿದೆ.
ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಜನ್ಮದಿನದ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿತ್ತು. ‘ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದರೆ ಆ ಕ್ರೀಡಾಪಟುಗಳನ್ನೂ ಪ್ರಶಸ್ತಿ ಪಟ್ಟಿಗೆ ಸೇರಿಸಬೇಕಾಗಿದೆ. ಹೀಗಾಗಿ ಪ್ರಶಸ್ತಿ ವಿತರಣೆ ವಿಳಂಬವಾಗಲಿದೆ’ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲು, ಮೇಜರ್ ಧ್ಯಾನ್ ಚಂದ್‌ಗೆ ಪ್ರಧಾನಿ ಮೋದಿ ಗೌರವ
ದೇಶದ ಕ್ರೀಡಾ ಸಾಧಕರಿಗೆ ಪ್ರತಿ ವರ್ಷ ಖೇಲ್ ರತ್ನ, ಅರ್ಜುನ, ದ್ರೋಣಾಚಾರ್ಯ ಹಾಗೂ ಧ್ಯಾನ್ ಚಂದ್ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಕೆಲದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಹೆಸರು ಬದಲಿಸಿರುವುದಾಗಿ ಟ್ವೀಟ್ ಮೂಲಕ ಖಚಿತಪಡಿಸಿದ್ದರು. ಇನ್ನು ಪ್ಯಾರಾಲಿಂಪಿಕ್ಸ್ ಆಗಸ್ಟ್ 25ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿದೆ.
ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಸೇರಿದಂತೆ ಒಟ್ಟು 7 ಪದಕಗಳನ್ನು ಭಾರತವು ಜಯಿಸಿ ಗರಿಷ್ಠ ಪದಕಗಳ ಸಾಧನೆ ಮಾಡಿದೆ. ಜಾವಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವು ಮೂಲಕ ಅಥ್ಲೆಟಿಕ್ಸ್ ವಿಭಾಗದಲ್ಲಿ ಶತಮಾನದ ಬಳಿಕ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಕಳೆದ ವರ್ಷವೇ ನೀರಜ್ ಚೋಪ್ರಾಗೆ ಖೇಲ್ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಆದರೆ ನೀರಜ್‌ಗೆ ಖೇಲ್ ರತ್ನ ಪ್ರಶಸ್ತಿ ದಕ್ಕಿರಲಿಲ್ಲ. ಈ ಬಾರಿ ನೀರಜ್‌ಗೆ ಖೇಲ್ ರತ್ನ ಪ್ರಶಸ್ತಿ ಸಿಗುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕೇಳಿಬರಲಾರಂಭಿಸಿದೆ.