ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ, ಇದೀಗ ಸತತ ಎರಡನೇ ಪದಕ ಗೆದ್ದ ಬೆನ್ನಲ್ಲೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ, ಬರೋಬ್ಬರಿ 89.45 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡಿದ್ದ ನೀರಜ್‌ಗೆ, ಪ್ಯಾರಿಸ್‌ನಲ್ಲಿ ಚಿನ್ನ ಗೆಲ್ಲಲು ಸಾಧ್ಯವಾಗಲಿಲ್ಲ.
ಇದೀಗ ಈ ಕುರಿತಂತೆ ಭಾರತದ ಪ್ರಖ್ಯಾತ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ, ಮೊದಲ ಬಾರಿಗೆ ಸಾಮಾಜಿಕ ಜಾಲತಾಣವಾದ ಎಕ್ಸ್(ಟ್ವಿಟರ್) ಮೂಲಕ ಮನಬಿಚ್ಚಿ ಮಾತನಾಡಿದ್ದಾರೆ. "ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮತ್ತೊಂದು ಪದಕ ಗೆದ್ದಿದ್ದು ತುಂಬಾ ಖುಷಿ ಕೊಟ್ಟಿತು. ಈ ಬಾರಿ ಪ್ಯಾರಿಸ್‌ನಲ್ಲಿ ನಮ್ಮ ರಾಷ್ಟ್ರಗೀತೆ ಮೊಳಗಿಸಲು ಸಾಧ್ಯವಾಗಲಿಲ್ಲ. ಆದರೆ ನನ್ನ ಮುಂದಿನ ಪ್ರಯತ್ನ ಇದೇ ಗುರಿಯತ್ತ ನೆಟ್ಟಿದೆ" ಎಂದು ನೀರಜ್ ಚೋಪ್ರಾ ಹೇಳಿದ್ದಾರೆ.
ಪದಕ ಗೆದ್ದ ನದೀಂ-ನೀರಜ್: ಹೃದಯ ಗೆದ್ದ ಅಮ್ಮಂದಿರು..!
ಮತ್ತೊಮ್ಮೆ ಒಲಿಂಪಿಕ್ ಪೋಡಿಯಂ ತಲುಪಿದ್ದು ನಿಜಕ್ಕೂ ಹೆಮ್ಮೆಯನ್ನುಂಟು ಮಾಡಿತು. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದಗಳು. ಜೈ ಹಿಂದ್ ಎಂದು ನೀರಜ್ ಚೋಪ್ರಾ ಪೋಸ್ಟ್ ಮಾಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹೆಮ್ಮೆಯ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಚಿನ್ನ ಗೆಲ್ಲಬಹುದು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ನೆರೆಯ ಪಾಕಿಸ್ತಾನದ ಅರ್ಷದ್ ನದೀಂ ತಮ್ಮ ಎರಡನೇ ಪ್ರಯತ್ನದಲ್ಲಿ 92.97 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾದರು. ಇನ್ನು ಈ ಸೀಸನ್‌ನ ಬೆಸ್ಟ್ ಪ್ರದರ್ಶನ ತೋರಿದ ಹೊರತಾಗಿಯೂ ನೀರಜ್ ಚೋಪ್ರಾ ರಜತ ಪದಕಕ್ಕೆ ತೃಪ್ತಿಪಟ್ಟುಕೊಂಡರು.
